ನವದೆಹಲಿ: ರಾಜಕೀಯವಾಗಿ ಬಿಜೆಪಿಯನ್ನು ವಿರೋಧಿಸಲು ಹಲವು ಕಾರಣಗಳಿವೆ ಸಂಸತ್ ಭವನ ಉದ್ಘಾಟನೆ ವಿಚಾರದಲ್ಲಿ ರಾಜಕೀಯ ಮಾಡುವುದು ನನಗೆ ಇಷ್ಟವಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಹೇಳಿದರು.
ಜೆಡಿಎಸ್ ಆತ್ಮಾವಲೋಕನಾ ಸಭೆಯಲ್ಲಿ ಮಾತನಾಡಿ, ನಾನು ಸಂಸತ್ ಭವನ ಉದ್ಘಾಟನೆಯಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಇದು ದೇಶದ ಆಸ್ತಿ, ಯಾರ ವೈಯಕ್ತಿಕ ವಿಚಾರವೂ ಅಲ್ಲ ಎಂದರು. ಉದ್ಘಾಟನಾ ಕಾರ್ಯಕ್ರಮ ಬಹಿಷ್ಕರಿಸಲು ಅದೇನೂ ಬಿಜೆಪಿ ಅಥವಾ ಆರ್ ಎಸ್ ಎಸ್ ಕಚೇರಿಯೇ ಎಂದು ಪ್ರಶ್ನಿಸಿದರು.
ನಾನು ಸಂಸತ್ತಿನ ಉಭಯ ಸದನಗಳಿಗೆ ಚುನಾಯಿತನಾಗಿದ್ದು, ಸಾಂವಿಧಾನಿಕ ಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸಿದ್ದೇನೆ. ಈಗಲೂ ರಾಜ್ಯಸಭಾ ಸದಸ್ಯನಾಗಿದ್ದು, ಸಾಂವಿಧಾನಿಕ ಮೌಲ್ಯಗಳನ್ನು ಕಾಪಾಡಲು ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.
ಅನೇಕ ಪಕ್ಷಗಳು ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮವನ್ನು ಬಹಿಷ್ಕರಿಸಿವೆ. ಓರ್ವ ಮಾಜಿ ಪ್ರಧಾನಿಯಾಗಿ ನೀವು ಹೋಗುತ್ತೀರಾ? ಇಲ್ಲವಾ? ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಹೌದು, ನಾನು ಸಂವಿಧಾನಕ್ಕೆ ಬದ್ಧನಾಗಿದ್ದೇನೆ. ಅದಕ್ಕಾಗಿ ಸಂಸತ್ ಭವನ ಉದ್ಘಾಟನೆಗೆ ಹೋಗುತ್ತೇನೆ ಎಂದು ಅವರಿಗೆ ಹೇಳಲು ಬಯಸುತ್ತೇನೆ ಎಂದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಸೋತಿದೆ ಎಂಬುದಕ್ಕೆ ನನಗೆ ಬಹಳ ನೋವಿದೆ. ಅದೇ ನೋವಿನಿಂದ ಕಾಲ ದೂಡಲು ಸಾಧ್ಯವೇ? ಪುಟಿದೆದ್ದು ಪಕ್ಷ ಕಟ್ಟಬೇಕು, ಅಧಿಕಾರಕ್ಕೆ ಬರಲು ಶ್ರಮಿಸಬೇಕು ಎಂದು ಅಭಿಪ್ರಾಯಪಟ್ಟರು.