ಚಾಮರಾಜನಗರ: ಎಐಸಿಸಿ ನೂತನ ಅಧ್ಯಕ್ಷರಾಗಿ ಎಂ.ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಪಟಾಕಿ ಸಿಡಿಸಿ, ಸಿಹಿಹಂಚಿ ಸಂಭ್ರಮಿಸಿದರು.
ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ‘ಹಿರಿಯ ನಾಯಕ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವುದು ಸಂತಸ ತಂದಿದೆ. ಖರ್ಗೆಯವರು 9 ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದು, ಅಪಾರ ರಾಜಕೀಯ ಅನುಭವ ಹೊಂದಿದ್ದಾರೆ. ರಾಜಕಾರಣದಲ್ಲಿ ಒಂದು ಕಪ್ಪುಚುಕ್ಕಿ ಇಲ್ಲದೆ ಆಡಳಿತ ಕೊಟ್ಟಿದ್ದಾರೆ’ ಎಂದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ‘ಖರ್ಗೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಪದಗ್ರಹಣ ಮಾಡಿರುವುದು ನಮಗೆಲ್ಲರಿಗೂ ಖಷಿ, ಹೆಮ್ಮೆಯ ವಿಷಯ. ಪಕ್ಷವೂ ಅವರ ಅನುಭವ, ಮಾರ್ಗದರ್ಶನದಿಂದ ದೇಶ, ರಾಜ್ಯದಲ್ಲಿ ಸುಭದ್ರವಾಗಿ ಕಾಂಗ್ರೆಸ್ ಕಟ್ಟುತ್ತೇವೆ’ ಎಂದರು. ‘ರಾಜ್ಯದಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಸರ್ಕಾರ ರಚನೆ ಮಾಡುತ್ತೇವೆ. ಜಿಲ್ಲೆಯಲ್ಲಿ ನಾಲ್ಕೂ ಸ್ಥಾನಗಳನ್ನು ಗೆಲ್ಲುತ್ತೇವೆ’ ಎಂದರು.
ಚಾಮರಾಜೇಶ್ವರಸ್ವಾಮಿ ದೇವಾಲಯದ ಆವರಣದಿಂದ ಭುವನೇಶ್ವರಿ ವೃತ್ತದ ವರೆಗೂ ಮೆರವಣಿಗೆ ನಡೆಸಿದ ಮುಖಂಡರು ಮತ್ತು ಕಾರ್ಯಕರ್ತರು, ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ಪರ ಘೋಷಣೆಗಳನ್ನು ಕೂಗಿದರು.
ದೊಡ್ಡರಾಯಪೇಟೆಯಲ್ಲೂ ಸಂಭ್ರಮ: ಮಲ್ಲಿಕಾರ್ಜುನಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ತಾಲ್ಲೂಕಿನ ದೊಡ್ಡರಾಯಪೇಟೆಯಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಕಾಂಗ್ರೆಸ್ ಜಿಲ್ಲಾ ಸಮಿತಿ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಆರ್.ಮಹದೇವು ಇದ್ದರು.