ಬೆಂಗಳೂರು: ಮಾರ್ಚ್ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕೊಡಿ ಎಂದು ಮುಸ್ಲಿಂ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿವೆ.
ಹಿಜಾಬ್ ನಿಷೇಧದಿಂದ ಕಳೆದ ವರ್ಷ 5 ಸಾವಿರಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಸಾಧ್ಯವಾಗಲಿಲ್ಲ. ಇದರಿಂದ ಶಿಕ್ಷಣವನ್ನು ಮೊಟಕುಗೊಳಿಸುವ ಸ್ಥಿತಿಗೆ ವಿದ್ಯಾರ್ಥಿನಿಯರು ಬಂದಿದ್ದಾರೆ ಎಂದು ತಿಳಿಸಿದ್ದಾರೆ.
ಕರ್ನಾಟಕದ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಪೀಠ ವಿಚಾರಣೆಗೆ ಪರಿಗಣಿಸಿದೆ. ಮಾರ್ಚ್ 9 ರಂದು ಪರೀಕ್ಷೆಗಳು ಪ್ರಾರಂಭವಾಗಲಿವೆ ಎಂದು ವಕೀಲರು ನ್ಯಾಯಪೀಠದ ಗಮನಕ್ಕೆ ತಂದರು. ಆಗ, ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ , ಈ ಕೇಸ್ ನ್ನು ವಿಚಾರಣೆಗೆ ಪರಿಗಣಿಸುವ ವಿಚಾರದಲ್ಲಿ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದರು.
ವಿದ್ಯಾರ್ಥಿನಿಯರು ಈಗಾಗಲೇ ಒಂದು ವರ್ಷವನ್ನು ಕಳೆದುಕೊಂಡಿದ್ದಾರೆ ಮತ್ತು ಮುಂಬರುವ ಪರೀಕ್ಷೆಗಳು ಮಾರ್ಚ್ 9 ರಂದು ಪ್ರಾರಂಭವಾಗಲಿವೆ , ಹೀಗಾಗಿ ಅವಕಾಶ ಕೊಡಿ ಎಂದು ಕಳಕಳಿಯಿಂದ ವಿನಂತಿಸಿದ್ದಾರೆ. ಅಂತಿಮ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಸಜ್ಜಾಗುತ್ತಿರುವಾಗ ಈ ವಿಚಾರವಾಗಿ ವಿದ್ಯಾರ್ಥಿನಿಯರ ಪರ ವಕೀಲರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.