ಬೆಂಗಳೂರು : ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಸಾಕಷ್ಟುಶ್ರಮ ಹಾಕಿದ್ದೇನೆ, ಯಾರೂ ಯಾರನ್ನೂ ರಾಜಕೀಯವಾಗಿ ಮುಗಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ರಾಜಕಾರಣದಲ್ಲಿ ಎಲ್ಲರಿಗೂ ಅವರದೇ ಆದ ಶಕ್ತಿ ಇರುತ್ತದೆ. ನನಗೆ ನನ್ನದೇ ಆದ ಶಕ್ತಿ ಇದೆ. ನಾನು ಪಕ್ಷ ಕಟ್ಟಿಬೆಳೆಸಿದ್ದೇನೆ ಎಂದರು. ಸ್ವಪಕ್ಷದವರಿಗೆ ಪರೋಕ್ಷವಾಗಿ ಎಚ್ಚರಿಕೆಯ ಸಂದೇಶ ನೀಡಿದ ಬಿಎಸ್ ಯಡಿಯೂರಪ್ಪ, ಪಕ್ಷವನ್ನು ಅಧಿಕಾರಕ್ಕೆ ತಂದವರು ಯಾರು? ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಾಗಲಿ, ಗೊಂದಲಗಳಾಗಲಿ ಇಲ್ಲ.
ಮಾಧ್ಯಮ ಸ್ನೇಹಿತರು ಯಾವುದನ್ನೂ ಸೃಷ್ಟಿಸಬಾರದು. ನಾವೆಲ್ಲಾ ಒಗ್ಗಟ್ಟಾಗಿದ್ದೇವೆ. ನಮ್ಮದು ಒಂದೇ ಅಜೆಂಡಾ ಇದ್ದು, ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದು. ಅದಕ್ಕೆ ಬೇಕಾದ ಎಲ್ಲಾ ಶ್ರಮ ಹಾಕುತ್ತೇನೆ. ರಾಜ್ಯದ ಉದ್ದಗಲಕ್ಕೂ ಓಡಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.
ದೇಶದಲ್ಲಿ ನಾಯಕತ್ವದ ಕೊರತೆಯಲ್ಲಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಸ್ವಲ್ಪ ಉಸಿರಾಡುತ್ತಿದೆ. ಅದರ ಉಸಿರು ನಿಲ್ಲಿಸಬೇಕಿದೆ. ರಾಜ್ಯದಲ್ಲಿ ಬಿಜೆಪಿ ಪರ ಗಾಳಿ ಬೀಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಮುನ್ನಡೆಯುತ್ತಿದೆ.ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಹೆಚ್ಚು ಕಾರ್ಯಕ್ರಮಗಳು ರಾಜ್ಯದಲ್ಲಿ ನಡೆಯುತ್ತಿದ್ದು, ಸ್ಪಷ್ಟಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ ಎಂದರು.