ಬೆಂಗಳೂರು : ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದೇ ಬರುತ್ತದೆ. ಇದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ. ಪ್ರತಿ ರಾಜ್ಯದ ಒಂದು ಕ್ಷೇತ್ರದಲ್ಲಿ ಒಬ್ಬರಾದರೂ ನಮ್ಮ ಶಾಸಕರು ಇರಬೇಕು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಜೆ.ಪಿ.ಭವನದಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಪರಿಷತ್ ಸಭೆಯಲ್ಲಿ ಮಾತನಾಡಿ, ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ನಮ್ಮ ಕಾರ್ಯಕರ್ತರು ಇದ್ದಾರೆ. ಪ್ರತಿ ರಾಜ್ಯದಲ್ಲಿಯೂ ನಮ್ಮ ಪಕ್ಷದ ಶಾಸಕರು ಇರಬೇಕು, ನಮ್ಮ ಕೆಲಸ ನಾವು ಪ್ರಾಮಾಣಿಕವಾಗಿ ಮಾಡಬೇಕು ಎಂದರು. ನನ್ನನ್ನು ರಾಷ್ಟ್ರೀಯ ಅಧ್ಯಕ್ಷರಾಗಿ ಮರು ಆಯ್ಕೆ ಮಾಡಿದ್ದಕ್ಕೆ ಕಾರ್ಯಕಾರಿಣಿ ಸಮಿತಿಗೆ ಧನ್ಯವಾದಗಳು ಎಂದರು.
ಮಹಾ ಅಧಿವೇಶನದಲ್ಲಿ ಮೂರು ನಿರ್ಣಯ ಅಂಗೀಕಾರವಾಗಿವೆ. ಇದೊಂದು ಅತ್ಯುತ್ತಮ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ. ಲಕ್ಷಾಂತರ ಕಾರ್ಯಕರ್ತರು ಈ ಪಕ್ಷದ ಬೆನ್ನಲುಬು ಆಗಿದ್ದಾರೆ. ಕಾಂಗ್ರೆಸ್-ಬಿಜೆಪಿ ಬಗ್ಗೆ ಚರ್ಚೆ ಬೇಡ. ನಮ್ಮ ಕೆಲಸ ನಾವು ಪ್ರಾಮಾಣಿಕವಾಗಿ ಮಾಡಬೇಕು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜನತಾ ಜಲಧಾರೆ ಮಾಡಿದರು. ಈಗ ಪಂಚರತ್ನ ರಥಯಾತ್ರೆ ಮಾಡುತ್ತಿದ್ದಾರೆ. ಇವೆಲ್ಲವೂ ಜನರ ಅಭಿವೃದ್ಧಿ ಕಾರ್ಯಕ್ರಮಗಳು ಎಂದು ತಿಳಿಸಿದರು.
ಆರೋಗ್ಯ ವಿಚಾರದಲ್ಲಿ ಎಲ್ಲರಿಗೂ ಉಚಿತ ಚಿಕಿತ್ಸೆ ಲಭ್ಯವಾಗಬೇಕು. ಕ್ಯಾನ್ಸರ್, ಡಯಾಲಿಸಿಸ್‌ಗೆ ಲಕ್ಷಾಂತರ ರು. ಪಾವತಿಸಬೇಕು. ಆರೋಗ್ಯ ವಿಮೆಯನ್ನು ಸರ್ಕಾರವೇ ಮಾಡಬೇಕು. ಗ್ರಾಮಮಟ್ಟದಲ್ಲಿ ಹೆರಿಗೆಗೆ ತಕ್ಷಣಕ್ಕೆ ಬೇಕಾದ ಸೌಲಭ್ಯ ಸಿಗಬೇಕು. ಅಲ್ಲದೇ, ಪ್ರತಿ ಜಿಲ್ಲೆಯಲ್ಲಿ ಉದ್ಯೋಗ ನೀಡುವ ಯೋಜನೆ ಹಾಕಿದ್ದೆ. ಬಿಜೆಪಿ ಸರ್ಕಾರ ಅದನ್ನು ನಿಲ್ಲಿಸಿದ್ದಾರೆ. ನಾನು ಮಾಡಿದ ಯೋಜನೆಯನ್ನು ಮುಂದೆ ಬಂದ ಸರ್ಕಾರಗಳು ಗಾಳಿಗೆ ತೂರಿದವು. ನನ್ನ ಮುಂದಿನ ಯೋಜನೆಯಲ್ಲಿ ಮಹಿಳೆಯರು ಮತ್ತು ಯುವಕರಿಗೆ ಉದ್ಯೋಗ ಕಲ್ಪಿಸುವ ಉದ್ದೇಶ ಇದೆ ಎಂದು ಹೇಳಿದರು