ಚಿತ್ರದುರ್ಗ : ಇದೇ ತಿಂಗಳ 19ರಂದು ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಪಂಚರತ್ನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಗೊಂದಲವಿರುವ ಜೆಡಿಎಸ್ ಅಭ್ಯರ್ಥಿ ಯಾರು ಎಂದು ಘೋಷಿಸುವ ಸಾಧ್ಯತೆಗಳಿವೆ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಪಂಚರತ್ನ ಯಾತ್ರೆಯಲ್ಲಿ ಜೆಡಿಎಸ್‌ನ ಮೊದಲ ಹಂತದ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಹಿರಿಯೂರು ಟಿಕೇಟ್ ವಿಚಾರದಲ್ಲಿ ಗೊಂದಲ ಇರುವ ಬಗ್ಗೆ ಶೀಘ್ರದಲ್ಲೇ ಬಗೆಹರಿಯಲಿದೆ. ಇನ್ನು ದೇವೇಗೌಡರ ಕುಟುಂಬದಿಂದ ವ್ಯಕ್ತಿಯೊಬ್ಬರು ಹಿರಿಯೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ? ಎಂಬ ಪ್ರಶ್ನೆಗೆ ಉತ್ತರಿಸಿದ ನಿಖಿಲ್ ನಮ್ಮ ಕುಟುಂಬದಿಂದ ಹಿರಿಯೂರು ಕ್ಷೇತ್ರದಲ್ಲಿ ಯಾರು ಸ್ಪರ್ಧಿಸುವುದಿಲ್ಲ. ಇದು ಸುಳ್ಳು ಎಂದು ಗೊಂದಲಕ್ಕೆ ತೆರೆ ಎಳೆದರು.
ನಮ್ಮ ಪಕ್ಷದ ಕಾರ್ಯಕರ್ತರು ಬಹಳ ಸದೃಢವಾಗಿದ್ದು, ಜೆಡಿಎಸ್ ಪಕ್ಷ ಶಕ್ತಿಯುತವಾಗಿದೆ. ರಾಜ್ಯದ ಪ್ರತಿ ಕ್ಷೇತ್ರದಲ್ಲೂ ಎರಡು ಮೂರು ಅಭ್ಯರ್ಥಿಗಳು ಸ್ಪರ್ಧಿಸಲು ಮುಂದೆ ಬಂದಿದ್ದಾರೆ. ಹಾಗಾಗಿ ಯಾರು ಸೂಕ್ತ ಅಭ್ಯರ್ಥಿ ಎಂದು ಗ್ರೌಂಡ್ ರಿಪೋರ್ಟ್ ಮೂಲಕ ಪಕ್ಷದ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ ರಾಜ್ಯದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ನಡವಳಿಕೆಗಳನ್ನು ಜನರು ಗಮನಿಸಿದ್ದಾರೆ.
ಇತ್ತೀಚೆಗೆ ರಾಜ್ಯದ ಜನತೆ ಪ್ರಾದೇಶಿಕ ಪಕ್ಷದ ಕಡೆ ಒಲವು ತೋರಿದ್ದಾರೆ. ಮುಂದಿನ ದಿನಗಳಲ್ಲಿ ಆರೂವರೆ ಕೋಟಿ ಜನರ ಆಶೀರ್ವಾದ ಜೆಡಿಎಸ್ ಪಕ್ಷದ ಮೇಲಿರುತ್ತದೆ ಎಂದು ಹೇಳಿದರು.