ನವದೆಹಲಿ: ರಾಜಸ್ಥಾನದ ಪ್ರತಾಪಗಢ ಜಿಲ್ಲೆಯಲ್ಲಿ ಬುಡಕಟ್ಟು ಮಹಿಳೆಯನ್ನು ಆಕೆಯ ಪತಿ ಹಾಗೂ ಅತ್ತೆಯೇ ಸಾರ್ವಜನಿಕವಾಗಿ ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಪ್ರಕರಣದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಕಿಡಿಕಾರಿದ್ದಾರೆ.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ನಡ್ಡಾ, ರಾಜಸ್ಥಾನದಲ್ಲಿ ಆಡಳಿತಯಂತ್ರ ಸಂಪೂರ್ಣವಾಗಿ ಕುಸಿದಿದೆ. ಆದರೆ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಾತ್ರ ಸಚಿವರ ಬಣ ಜಗಳ ಪರಿಹರಿಸುವಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಿದರು.
ರಾಜಸ್ಥಾನದ ಪ್ರತಾಪ್‌ಗಢದಿಂದ ಬಂದಿರುವ ವಿಡಿಯೋ ಆಘಾತಕಾರಿಯಾಗಿದೆ. ರಾಜಸ್ಥಾನದಲ್ಲಿ ಆಡಳಿತವು ಸಂಪೂರ್ಣವಾಗಿ ಕುಸಿದಿದೆ ಎಂಬುದಕ್ಕೆ ಇದೇ ಸಾಕ್ಷಿ. ಅಶೋಕ್ ಗೆಹ್ಲೋಟ್ ತಮ್ಮ ಮಂತ್ರಿಗಳು ಬಣ ಜಗಳಗಳನ್ನು ಪರಿಹರಿಸುವಲ್ಲಿ ನಿರತರಾಗಿದ್ದಾರೆ. ಉಳಿದ ಸಮಯವನ್ನು ದೆಹಲಿಯಲ್ಲಿನ ಒಂದು ರಾಜವಂಶವನ್ನು ಸಮಾಧಾನಪಡಿಸಲು ವ್ಯಯಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ರಾಜಸ್ಥಾನ ಸರ್ಕಾರ ಮಹಿಳೆಯರ ಸುರಕ್ಷತೆಯ ವಿಷಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಕಳೆದ ಕೆಲವು ತಿಂಗಳುಗಳಲ್ಲಿ, ಕರೌಲಿ ಅಪ್ರಾಪ್ತೆ ಅತ್ಯಾಚಾರ ಪ್ರಕರಣ ಸೇರಿದಂತೆ ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳ ಸರಣಿಯನ್ನೇ ರಾಜಸ್ಥಾನ ಕಂಡಿದೆ. ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಯ ವಿಷಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿರುವುದರಲ್ಲಿ ಆಶ್ಚರ್ಯವಿಲ್ಲ. ಪ್ರತಿ ದಿನವೂ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ನಡೆಯುತ್ತಿವೆ. ರಾಜಸ್ಥಾನದ ಜನತೆ ರಾಜ್ಯ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ನಡ್ಡಾ ಬರೆದುಕೊಂಡಿದ್ದಾರೆ.
ಘಟನೆ ಹಿನ್ನೆಲೆ:
ಮಹಿಳೆಯೊಬ್ಬಳನ್ನು ಆಕೆಯ ಪತಿ ಹಾಗೂ ಸಂಬಂಧಿಕರು ವಿವಸ್ತ್ರಗೊಳಿಸಿ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜಿಲ್ಲೆಯ ಧರಿಯಾವಾಡ ಪೊಲೀಸ್ ಠಾಣಾ ವ್ಯಾಪ್ತಿಯ ಪಹಾಡ ಗ್ರಾಮ ಪಂಚಾಯತ್‌ನ ನಿಚಲಕೋಟ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಸಂತ್ರಸ್ತೆಗೆ ವರ್ಷದ ಹಿಂದೆ ಮದುವೆಯಾಗಿತ್ತು. ಆದರೆ, ಆಕೆ ಗ್ರಾಮದಲ್ಲಿ ಇನ್ನೊಬ್ಬ ವ್ಯಕ್ತಿಯೊಂದಿಗೆ ವಾಸಿಸಲು ಪ್ರಾರಂಭಿಸಿದ್ದಳು ಎಂಬ ಆರೋಪ ಪತಿ ಕುಟುಂಬದಿಂದ ಕೇಳಿಬಂದಿದೆ. ಪ್ರಕರಣದಲ್ಲಿ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ; ರಾಜಸ್ಥಾನ: ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ; ಸಿಎಂ ಗೆಹ್ಲೋಟ್ ಖಂಡನೆ
‘ಪ್ರತಾಪಗಢ ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರು ಬೆನ್ನಟ್ಟಿದ್ದರಿಂದ ಓಡಿಹೋಗಲು ಯತ್ನಿಸಿದ ಆರೋಪಿಗಳು ಗಾಯಗೊಂಡಿದ್ದಾರೆ. ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಪ್ರತಾಪಗಢ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ತಿಳಿಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.