ಕಲಬುರಗಿ : ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ, ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಕಿರುಕುಳ ನೀಡುತ್ತಿದ್ದಾರೆ. ಚಿತ್ತಾಪುರ ತಾಲೂಕಿನ ಯುವ ಮುಖಂಡ ಮಣಿಕಂಠ ರಾಠೋಡ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ಅವರನ್ನು ಪೊಲೀಸ್ ಇಲಾಖೆಯಿಂದ ಟಾರ್ಚರ್ ನೀಡಲಾಗುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಬ್ಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ವಿಚಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಹೋರಾಟಕ್ಕೆ ಕರೆ ನೀಡುವುದು ಅಪರಾಧವಲ್ಲ. ಪೊಲೀಸರು ಅಧಿಕಾರದ ದುರುಪಯೋಗ ಮಾಡಿಕೊಂಡು ಮಣಿಕಂಠ ರಾಠೋಡ್ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್ ಹೊರಡಿಸಿರುವುದನ್ನು ಪಕ್ಷದ ವತಿಯಿಂದ ತೀವ್ರವಾಗಿ ಖಂಡಿಸುತ್ತೇವೆ ಎಂದರು.
ಇದನ್ನೂ ಓದಿ : ಆರ್. ಅಶೋಕ್‌ಗೆ ಬುದ್ದಿ ಭ್ರಮಣೆ ಆಗಿರಬೇಕು; ಡಿ.ಕೆ. ಶಿವಕುಮಾರ್‌ಗೆ ವಾಗ್ದಾಳಿ!
ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿಚಾರಗಳನ್ನು ಹೇಳುವ ಸ್ವಾತಂತ್ರ್ಯ ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಇದೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು, ರಾಜಕೀಯ ದುರುದ್ದೇಶದಿಂದ, ಪೋಲಿಸ್ ಇಲಾಖೆಯ ಮೇಲೆ ಒತ್ತಡ ಹಾಕಿ ವಿನಾಕಾರಣ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸೇರಿದಂತೆ ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಸ್ತುವಾರಿ ಸಚಿವರ ಒತ್ತಡದಿಂದ ಪೋಲಿಸ್ ಇಲಾಖೆ ಜಮೀನು ರಹಿತ ಬಂಧನ ಮಾಡಿರುವುದು ಖಂಡನೀಯ, ಈ ರೀತಿಯ ದ್ವೇಷದ ರಾಜಕಾರಣ ನಿಲ್ಲಿಸಬೇಕು. ಇಲ್ಲದ್ದಿದ್ದರೆ ಇಡೀ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಹೋರಾಟ ಮಾಡುತ್ತೇವೆಂದು ಎಚ್ಚರಿಕೆ ನೀಡಿದರು.
ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ರಾಜಕೀಯ ಅಭದ್ರತೆ ಕಂಡು ಬರುತ್ತಿದೆ. ಅವರ ವಿರುದ್ಧ ಧ್ವನಿ ಎತ್ತುವವರನ್ನು ಟಾರ್ಗೆಟ್ ಮಾಡಿ ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ದೂರಿದರು.
ಅಧಿಕಾರವಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ದುರುಪಯೋಗ ಪಡಿಸಿಕೊಂಡು ರಾಠೋಡ್ ಅವರಿಗೆ ಸತತವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಸಚಿವ ಖರ್ಗೆ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.