ಬೆಂಗಳೂರು: ಬೆಲೆ ಏರಿಕೆಯ ಸಂಕಷ್ಟದಿಂದ ಜನಸಾಮಾನ್ಯರು ತತ್ತರಿಸಿದ್ದು, ಹೀಗಾಗಿ ಗೃಹಲಕ್ಷ್ಮೀ ಯೋಜನೆ ರೂಪಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಣೆ ಮಾಡಿದರು.
‘ನಾ ನಾಯಕಿ’ ಸಮಾವೇಶದಲ್ಲಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸಮ್ಮುಖದಲ್ಲಿ ಮಾತನಾಡಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದ ಮಹಿಳೆಯರಿಗೆ ಬೇಷರತ್ತಾಗಿ 2,000 ರೂ. ನೀಡಲಾಗುವುದು. ಹೀಗಾಗಿ ಇಡೀ ಕುಟುಂಬದ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮಹಿಳೆಯರಿಗಾಗಿ ಈ ಕೊಡುಗೆ ನೀಡುತ್ತಿದ್ದೇವೆ. ಯೋಜನೆಯ ಭರವಸೆಯೊಂದಿಗೆ ಗ್ಯಾರಂಟೀ ಚೆಕ್ ನ್ನು ಈಗಲೇ ನೀಡುತ್ತಿದ್ದೇವೆ ಎಂದು ಹೇಳಿದರು.
ಪ್ರಿಯಾಂಕಾ ಗಾಂಧಿ ಮಾತನಾಡಿ, ಬೆಲೆ ಏರಿಕೆಯಿಂದ ಇಂದು ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಕರ್ನಾಟಕ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪವಿದೆ. ಪಿಎಸ್ಐ ನೇಮಕಾತಿ ಹಗರಣ ಸೇರಿ ಹಲವು ಭ್ರಷ್ಟಾಚಾರ ಆರೋಪಗಳಿವೆ. ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಅನಗತ್ಯ ವಿವಾದಗಳನ್ನು ಸೃಷ್ಟಿಸಿ ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ಶ್ರೀಮಂತರ ಪರ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.