ಬೆಂಗಳೂರು: ಪವರ್ ಸ್ಟಾರ್, ದಿವಂಗತ ಪುನೀತ್ ರಾಜ್‌ಕುಮಾರ್ ಗೆ ಮರಣೋತ್ತರವಾಗಿ ನವೆಂಬರ್ 1 ರಂದು ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಪುನೀತ್ ರಾಜ್ ಕುಮಾರ್ ಕುಟುಂಬದವರೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದ್ದು, ಕನ್ನಡ ಚಿತ್ರರಂಗಕ್ಕೆ ಕನ್ನಡ ಭಾಷೆ, ಸಂಸ್ಕೃತಿಗೆ ಪುನೀತ್ ರಾಜ್ ಕುಮಾರ್ ಅವರ ಕೊಡುಗೆ ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದರು. ಅತಿ ಚಿಕ್ಕ ವಯಸ್ಸಿನಲ್ಲಿ ಈ ಪ್ರಶಸ್ತಿ ಪಡೆಯುತ್ತಿರುವ ರತ್ನ ಪುನೀತ್ ರಾಜ್‌ಕುಮಾರ್ ಅವರಿಗೆ ಸಲ್ಲುತ್ತದೆ.
ಕಾರ್ಯಕ್ರಮಕ್ಕೆ ಸೂಪರ್ ಸ್ಟಾರ್ ರಜನಿಕಾಂತ್, ಜ್ಯೂನಿಯರ್ ಎನ್‌ಟಿ ಆರ್ ಅವ್ರಿಗೆ ಆಹ್ವಾನ ನೀಡಲಾಗಿದೆ. ಅವರು ಕೂಡ ಭಾಗಿಯಾಗ್ತಾರೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಕಂಬಾರರು, ರಾಜ್‌ಕುಮಾರ್ ಕುಟುಂಬದವರು ಭಾಗಿಯಾಗ್ತಾರೆ ಎಂದು ತಿಳಿಸಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಆಯ್ಕೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಸಚಿವರಾದ ಸುನಿಲ್ ಕುಮಾರ್, ಆರ್. ಅಶೋಕ್, ಶಿವರಾಂ ಹೆಬ್ಬಾರ್ ಹಾಗೂ ಸಮಿತಿ ಸದಸ್ಯರು ಭಾಗಿಯಾಗಿದ್ದಾರೆ. ಈ ವರೆಗೆ 8 ಜನರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗಿದ್ದು, 2009 ರ ನಂತರ ಮೊದಲ ಬಾರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆಎಂದರು.