ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್ ಮಾಡಿದ್ದ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಮುಖಂಡರು ಇಂದು ಸಿಎಂ ಭೇಟಿಯಾಗಿ ಚರ್ಚೆ ನಡೆಸಿದರು.
ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್ ಮತ್ತು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ನೇತೃತ್ವದ ನಿಯೋಗ ಸಿಎಂ ಸಿದ್ದರಾಮಯ್ಯ ಜೊತೆ ಸಭೆ ನಡೆಸಿತು. ವಿವಿಧ ಸಂಘಟನೆಗಳ ಮುಖಂಡರು ನಿಯೋಗದಲ್ಲಿದ್ದರು.


ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕುರಬೂರು ಶಾಂತಕುಮಾರ್, ಕಾವೇರಿ ವಿಚಾರವಾಗಿ ಸಿಎಂ ಜೊತೆ ಸುದೀರ್ಘ ಚರ್ಚೆ ನಡೆಸಿದ್ದೇವೆ. ಕುಡಿಯುವ ನೀರಿನ ಬಗ್ಗೆಯೂ ಎಲ್ಲಾ ಮಾಡಿದ್ದೇವೆ. ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ತಕ್ಷಣ ನಿಲ್ಲಿಸಬೇಕು. ವಿಶೇಷ ಆಧಿವೇಶನ ಕರೆದು ಚರ್ಚಿಸಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರದ್ದು ಮಾಡುವಂತೆ ಆಗ್ರಹಿಸಬೇಕು ಎಂದು ನಾವು ಒತ್ತಾಯಿಸಿದ್ದೇವೆ ಎಂದು ಹೇಳಿದರು.
ಇವತ್ತು ದೆಹಲಿಯಲ್ಲಿ ನಡೆಯುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನೋಡಿಕೊಂಡು ಮುಂದಿನ ತೀರ್ಮಾನ ಮಾಡುತ್ತೇವೆ. ಸಂಜೆ ನಿವೃತ್ತಿ ನ್ಯಾಯಮೂರ್ತಿಗಳ ಸಭೆ ಕರೆದಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ. ಸಿಎಂ ವಾಸ್ತವ ಸಂಗತಿಗಳನ್ನು ಒಪ್ಪಿಕೊಂಡಿದ್ದಾರೆ. ನಾವು ಜಲ ಸಂರಕ್ಷಣಾ ಸಮಿತಿಯ ಸಭೆ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.