ಹಾಸನ: ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ಪಡೆದು ಮೂರು ಅವಧಿಗೆ ಗೆದ್ದಿರುವ ಶಿವಲೆಂಗೇಗೌಡ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ.
ಜೆಡಿಎಸ್ ನಾಯಕರ ವರ್ತನೆಯಿಂದ ಹತಾಶರಾಗಿರುವ ಶಿವಲಿಂಗೇಗೌಡ ಒಂದೆರಡು ತಿಂಗಳಿಂದ ಜೆಡಿಎಸ್ ನಾಯಕರ ಜತೆ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಹಾಸನದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕೆ.ಎಂ ಶಿವಲಿಂಗೇಗೌಡ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದರು ಎಂದು ಹೆಸರು ಹೇಳಲಿಚ್ಛಿಸದ ಬೆಂಬಲಿಗರೊಬ್ಬರು ತಿಳಿಸಿದ್ದಾರೆ.
ಆದರೆ ಶಿವಲಿಂಗೇಗೌಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದು, ತಮ್ಮ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸೇರಲು ಇಚ್ಛಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗಷ್ಟೇ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಗೆ ಕಾಂಗ್ರೆಸ್ ನಾಯಕರು ಗ್ರೀನ್ ಸಿಗ್ನಲ್ ನೀಡಿದ್ದರು. ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರಲು ಅರಸೀಕೆರೆಯಲ್ಲಿ ತಮ್ಮ ಬೆಂಬಲಿಗರ ಸಭೆ ನಡೆಸಲು ಯೋಜಿಸಿದ್ದಾರೆ. ಶಿವಲಿಂಗೇಗೌಡ ಅವರು ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ರನ್ನು ಸಮಾವೇಶಕ್ಕೆ ಆಹ್ವಾನಿಸಿದ್ದು, ಡಿಕೆಶಿ ಸಹ ಭಾಗವಹಿಸಲು ಒಪ್ಪಿಗೆ ಸೂಚಿಸಿದ್ದಾರೆ. ಈ ಬಗ್ಗೆ ಸೂಕ್ತ ಸಮಯದಲ್ಲಿ ಸತ್ಯಾ ಸತ್ಯತೆ ಬಹಿರಂಗಪಡಿಸುತ್ತೇನೆ ಎಂದಿದ್ದಾರೆ.