ತುಮಕೂರು : ಇದು ನನ್ನ ಕೊನೆ ಚುನಾವಣೆ, ಮತ್ತೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು.
ಪತ್ರಕರ್ತರೊಂದಿಗೆ ಮಾತನಾಡಿ, ಇದು ನನ್ನ ಕೊನೆಯ ಚುನಾವಣೆ ಎಂದು ಭಾವಿಸಿಕೊಂಡು ಕ್ಷೇತ್ರದಲ್ಲಿ ಪ್ರವಾಸ ಕೈಗೊಳ್ಳುತ್ತೇನೆ, ಮಧುಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹೈಕಮಾಂಡ್ ನನಗೆ ಅವಕಾಶ ಮಾಡಿಕೊಟ್ಟಿದೆ ಇದು ಖುಷಿಯಾಗಿದೆ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಸಂಪೂರ್ಣ ವಿಶ್ವಾಸವಿದೆ, ಬಿಜೆಪಿ ಸರಕಾರದ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ ಎಂದರು.
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈಗಾಗಲೇ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಒಟ್ಟು 124 ಅಭ್ಯರ್ಥಿಗಳಿಗೆ ಮಣೆ ಹಾಕಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಡಿಕೆಶಿ, ಪರಂ ಸೇರಿದಂತೆ ಹಲವರಿಗೆ ಮೊದಲ ಹಂತದಲ್ಲಿ ಟಿಕೆಟ್ ಘೋಷಣೆ ಮಾಡಲಾಗಿದೆ.
ಬರುವ ಅಸೆಂಬ್ಲಿ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್, ಮನೆಯ ಯಜಮಾನಿಗೆ 2000 ಹಣ ನೀಡುವುದು, ಪ್ರತಿ ತಿಂಗಳು 10 ಕೆಜಿ ಅಕ್ಕಿ ನೀಡುವುದು ನಮ್ಮ ಪ್ರಣಾಳಿಕೆಯಲ್ಲಿ ಸೇರಿದ್ದು ಈ ಕಾರ್ಯವನ್ನು ಕಾರ್ಯಕರ್ತರು ಪ್ರತಿಯೊಬ್ಬರಿಗೂ ಮನವರಿಕೆ ಮಾಡಿಕೊಡಲು ಮನವಿ ಮಾಡಿದರು.