Tuesday, March 28, 2023
spot_img
- Advertisement -spot_img

ಪ್ರಧಾನಿ ಮೋದಿಯವರ ತಾಯಿ ಹೀರಾಬೆನ್ ಮೋದಿ ನಿಧನ : ಗಣ್ಯರಿಂದ ಸಂತಾಪ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ನಿಧನರಾಗಿದ್ದು, ಪ್ರಧಾನಿ ಮೋದಿಯವರು ಟ್ವೀಟ್‌ ಮಾಡಿದ್ದಾರೆ.

ತಮ್ಮ ತಾಯಿಯ ನಿಧನದ ಕುರಿತು ಟ್ವೀಟ್ ಮಾಡಿರುವ ಮೋದಿ ‘ದೇವರ ಪಾದದಲ್ಲಿ ವೈಭವದ ಶತಮಾನದ ಅಂತ್ಯ… ತಾಯಿಯಲ್ಲಿ ನಾನು ಯಾವಾಗಲೂ ತಪಸ್ವಿಯ ಪ್ರಯಾಣವನ್ನು ಒಳಗೊಂಡಿರುವ ತ್ರಿಮೂರ್ತಿಗಳನ್ನು ಅನುಭವಿಸಿದ್ದೇನೆ. ಅದು ನಿಸ್ವಾರ್ಥ ಕರ್ಮಯೋಗಿಯ ಸಂಕೇತವಾಗಿದೆ ಮತ್ತು ಮೌಲ್ಯಗಳಿಗೆ ಬದ್ಧವಾಗಿರುವ ಜೀವನ. ಅವರ 100ನೇ ಹುಟ್ಟುಹಬ್ಬದಂದು ಅವರನ್ನು ಭೇಟಿಯಾದಾಗ ಅವರು ಒಂದು ಮಾತನ್ನು ಹೇಳಿದರು, ಇದು ಯಾವಾಗಲೂ ನೆನಪಿನಲ್ಲಿಟ್ಟುಕೊಳ್ಳುವಂತಹದ್ದು. “ಬುದ್ಧಿವಂತಿಕೆಯಿಂದ ಕೆಲಸ ಮಾಡಿ, ಪರಿಶುದ್ಧತೆಯಿಂದ ಬದುಕಿ”. ಅಂದರೆ ಬುದ್ಧಿವಂತಿಕೆಯಿಂದ ಕೆಲಸ ಮಾಡಿ ಮತ್ತು ಶುದ್ಧತೆಯಿಂದ ಜೀವನ ನಡೆಸಬೇಕು’ ಎಂದು ಭಾವುಕ ನುಡಿಗಳನ್ನು ಮೋದಿ ಹೇಳಿದ್ದಾರೆ.

ಇನ್ನೂ ಮೋದಿಯವರ ತಾಯಿಯವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಪೂಜ್ಯ ತಾಯಿ ಹೀರಾಬೆನ್ ಅವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು. ದೇಶಕ್ಕೆ ಹೆಮ್ಮೆ ತಂದ ಪುತ್ರನಿಗೆ ಜನ್ಮ ನೀಡಿದ ಮಹಾತಾಯಿಗೆ ಸದ್ಗತಿ ಕೋರುತ್ತೇನೆ. ಪ್ರಧಾನಿಯವರಿಗೆ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಹೀರಾಬೆನ್ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಮೋದಿ ಮತ್ತು ಅವರ ಕುಟುಂಬಕ್ಕೆ ಭಗವಂತ ಕರುಣಿಸಲಿ ಎಂದು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮೂಲಕ ಪ್ರಾರ್ಥಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ನಿಧನಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರ ನಿಧನಕ್ಕೆ ನನ್ನ ಹೃತ್ಪೂರ್ವಕ ಸಂತಾಪಗಳು. ಅವರು ಪೂರ್ಣ ಜೀವನವನ್ನು ನಡೆಸಿದ ಶತಾಯುಷಿಯಾಗಿದ್ದರು, ಆ ಹಿರಿಯ ಜೀವಕ್ಕೆ ಆ ಭಗವಂತ ಚಿರಶಾಂತಿ ಕರುಣಿಸಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಮೋದಿ ಅವರಿಗೆ ನೀಡಲಿ ಎಂದು ಟ್ವೀಟ್ ಮೂಲಕ ಪ್ರಾರ್ಥಿಸಿದ್ದಾರೆ.

Related Articles

- Advertisement -

Latest Articles