ದಾವಣಗೆರೆ: ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ನಾಪತ್ತೆ ಪ್ರಕಣಕ್ಕೆ ಸಂಬಂಧಿಸಿದಂತೆ ಐದು ದಿನಗಳ ಬಳಿಕ ಕುರುಹು ಪತ್ತೆಯಾಗಿದೆ. ಚಂದ್ರಶೇಖರ್ ತೆಗೆದುಕೊಂಡು ಹೋಗಿದ್ದ ಕ್ರೆಟ ಕಾರು ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಕಾಲುವೆ ಬಳಿ ಸಂಚರಿಸಿರುವ ಕುರುಹು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಚಂದ್ರಶೇಖರ್ ಇದ್ದ ಕಾರು ತುಂಗಾ ಕಾಲುವೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.
ತುಂಗಾ ಕಾಲುವೆಗೆ ಕಾರು ಬಿದ್ದ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಶಾಸಕ ರೇಣುಕಾಚಾರ್ಯ ಹಾಗೂ ಪೊಲೀಸರು ಸೇರಿದಂತೆ ನೂರಾರು ಜನ ಕಾಲವೆ ಬಳಿ ಜಮಾಯಿಸಿದ್ದಾರೆ. ಚಂದ್ರಶೇಖರ್ ಭಾನುವಾರ ರಾತ್ರಿ 11.30 ರಿಂದ ನಾಪತ್ತೆಯಾಗಿದ್ದು ಇದುವರೆಗೂ ಕೂಡ ಯಾವುದೇ ಸುಳಿವು ಸಿಗುತ್ತಿಲ್ಲ. ಭಾನುವಾರ ಸಂಜೆ ಚಿಕ್ಕಮಗಳೂರು ಜಿಲ್ಲೆಯ ಗೌರಿಗದ್ದೆಗೆ ಹೋಗಿ ವಿನಯ್ ಗುರೂಜಿ ಆಶೀರ್ವಾದ ಪಡೆದಿದ್ದ ಚಂದ್ರು ರಾತ್ರಿ ಊರಿಗೆ ವಾಪಸ್ ಆಗಿದ್ದರು. ರಾತ್ರಿ 11 ಗಂಟೆ ಸುಮಾರಿಗೆ ದೆಹಲಿಯ ಸ್ನೇಹಿತರ ಜೊತೆ ಕೊನೆಯದಾಗಿ ಮಾತಾಡಿದ್ದಾನೆ. 11.30 ಕ್ಕೆ ಹೊನ್ನಾಳಿ ಪಟ್ಟಣದಲ್ಲಿ ಮೊಬೈಲ್ ಸ್ವಿಚ್ ಆಫ್ ಆಗಿದೆ. ಅಲ್ಲಿಂದ ಇಲ್ಲಿಯವರೆಗೆ ಸಿಗ್ನಲ್ ಟ್ರೇಸ್ ಆಗಿಲ್ಲ. ಅಲ್ಲದೆ ಶಿವಮೊಗ್ಗದಿಂದ ನ್ಯಾಮತಿ ತಾಲ್ಲೂಕಿನ ಸುರಹೊನ್ನೆಗೆ ಬಂದ ಸಿಸಿ ಕ್ಯಾಮರಾ ಪುಟೇಜ್ ಮಾತ್ರ ಸಿಕ್ಕಿದೆ. ಆದರೆ ಸುರಹೊನ್ನೆಯಿಂದ ಹೊನ್ನಾಳಿ ಗೆ ಬಂದ ಮಾಹಿತಿ ಸಿಗುತ್ತಿಲ್ಲ. ಆದರೆ ಚಂದ್ರಶೇಖರ್ ಮೊಬೈಲ್ ಮಾತ್ರ ಹೊನ್ನಾಳಿ ಪಟ್ಟಣದ ಸರ್ಕಲ್‌ನಲ್ಲಿ ಸ್ವಿಚ್ ಆಫ್ ಆಗಿದೆ. ಸದ್ಯ ತುಂಗಾ ಕಾಲುವೆ ಬಳಿ ಸಂಚರಿಸಿರುವ ಕುರುಹು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಚಂದ್ರಶೇಖರ್ ಇದ್ದ ಕಾರು ತುಂಗಾ ಕಾಲುವೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ರೇಣುಕಾಚಾರ್ಯ ಸೇರಿದಂತೆ ಕುಟುಂಬಸ್ಥರು ಆತಂಕಕ್ಕೀಡಾಗಿದ್ಧಾರೆ.