ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ನನ್ನ ಕ್ಷೇತ್ರ ವರುಣದಲ್ಲಿಯೇ ಸ್ಪರ್ಧೆ ಮಾಡಿ ಎಂದು ಹೇಳಿದ್ದೇನೆ ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಕೋಲಾರ, ಬಾದಾಮಿ ಹಾಗೂ ವರುಣ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ಮನವಿ ಮಾಡಲಾಗಿದೆ. ಚುನಾವಣೆಗೆ ಇನ್ನೂ ಸಮಯವಿದೆ. ಎಲ್ಲಿ ಸ್ಪರ್ಧೆ ಮಾಡಬೇಕು ಎಂಬ ತೀರ್ಮಾನವನ್ನು ಚುನಾವಣೆಯ ಸಮಯದಲ್ಲಿ ಸಿದ್ದರಾಮಯ್ಯ ಅವರೇ ತಿಳಿಸುತ್ತಾರೆ ಎಂದರು.
ಚಾಮುಂಡೇಶ್ವರಿ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಇನ್ನೂ ಆಗಿಲ್ಲ. ಬದಲಾಗುತ್ತಿರುವ ರಾಜಕೀಯ ವಿದ್ಯಮಾನ ಗಮನಿಸಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.
ನಮ್ಮ ತಂದೆ ಸಿದ್ದರಾಮಯ್ಯ ಎಲ್ಲೇ ಸ್ಪರ್ಧೆ ಮಾಡಿದರೂ ಗೆಲ್ಲುತ್ತಾರೆ. ಅವರಿಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಬೆಂಬಲವಾಗಿದ್ದಾರೆ. ಹಲವಾರು ಕ್ಷೇತ್ರಗಳಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ಸ್ಪರ್ಧೆ ಮಾಡುವಂತೆ ಮನವಿ ಮಾಡುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಅವರು ಎಲ್ಲಿ ಸ್ಪರ್ಧೆ ಮಾಡಬೇಕು ಎಂಬ ತೀರ್ಮಾನವನ್ನು ಇನ್ನೂ ಕೈಗೊಂಡಿಲ್ಲ ಎಂದು ತಿಳಿಸಿದರು.