ಮೈಸೂರು : ತವರು ಜಿಲ್ಲೆಯಲ್ಲಿ ಮೂರು ದಿನಗಳ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದು ಕೂಡ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಇಂದು ಬೆಳಿಗ್ಗೆ 9 ಗಂಟೆಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿರುವ ಸಿಎಂ, ಸರ್ಕಾರ 100 ದಿನಗಳನ್ನು ಪೂರೈಸಿರುವ ಹಿನ್ನೆಲೆ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್ ಸಿಎಂಗೆ ಸಾಥ್ ನೀಡಲಿದ್ದಾರೆ.
ಬೆಳಿಗ್ಗೆ 10.30ಕ್ಕೆ ಸುತ್ತೂರು ಶಾಖಾ ಮಠದಲ್ಲಿ ನಡೆಯಲಿರುವ ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಬಳಿಕ ಕಡಕೋಳ ಕೈಗಾರಿಕಾ ಪ್ರದೇಶಕ್ಕೆ ಸಿಎಂ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ1:45ಕ್ಕೆ ಕೆ.ಆರ್ ಆಸ್ಪತ್ರೆಯ ಸುಟ್ಟ ಗಾಯಗಳ ನವೀಕರಣ ಕಟ್ಟಡವನ್ನು ಸಿಎಂ ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 3ಗಂಟೆಗೆ ಮೈಸೂರು, ಚಾಮರಾಜನಗರ ಜಿಲ್ಲೆಗಳ ಶಾಸಕರರನ್ನು ಸಿಎಂ ಭೇಟಿ ಮಾಡಲಿದ್ದು, ಸಂಜೆ 6 ಗಂಟೆಗೆ ವಕೀಲರ ಸಂಘದ ಕಚೇರಿಗೆ ಭೇಟಿ ನೀಡಲಿದ್ದಾರೆ.
ಇದನ್ನೂ ಓದಿ : ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧ ಎಫ್‌ಐಆರ್!
ಇತ್ತ ಸಿಎಂ ತವರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದರೆ, ಆತ ಡಿಸಿಎಂ ಡಿ.ಕೆ ಶಿವಕುಮಾರ್ ಕೂಡ ಎರಡು ದಿನಗಳಿಂದ ಸಾಂಸ್ಕೃತಿಕ ನಗರಿಯಲ್ಲೇ ಇದ್ದಾರೆ. ನಾಳೆ (ಆಗಸ್ಟ್ 30) ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಲಿರುವ ಹಿನ್ನೆಲೆ ಡಿಕೆಶಿ ಮೈಸೂರಿನಲ್ಲಿದ್ದು, ಕಾರ್ಯಕ್ರಮ ನಡೆಯಲಿರುವ ಸ್ಥಳಕ್ಕೆ ಎರಡೆರಡು ಬಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಡಿಸಿಎಂ ಡಿಕೆಶಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಾಥ್ ನೀಡಿದ್ದು, ಗೃಹಲಕ್ಷ್ಮಿ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಈ ನಡುವೆ ಡಿಕೆಶಿ & ಟೀಂ ಸಿಎಂ ಸಿದ್ದರಾಮಯ್ಯ ಅವರನ್ನು ಓವರ್ ಟೇಕ್ ಮಾಡ್ತಿದೆ ಎಂಬ ಮಾತುಗಳು ಕೇಳಿ ಬಂದಿವೆ. ಇದಕ್ಕೆ ಪುಷ್ಠಿ ನೀಡುವಂತೆ, ಸಿಎಂ ಮೈಸೂರಿನಲ್ಲಿರುವಾಗಲೇ ಡಿಸಿಎಂ ಡಿಕೆಶಿ ಪ್ರತ್ಯೇಕವಾಗಿ ಓಡಾಡ್ತಿದ್ದಾರೆ. ಸಿದ್ದರಾಮಯ್ಯ ಅವರ ಆಪ್ತರಾದ ಸಚಿವ ಹೆಚ್.ಸಿ ಮಹದೇವಪ್ಪ, ಕೆ.ವೆಂಕಟೇಶ್ ಕೂಡ ಸೈಡ್ ಲೈನ್ ಆಗಿದ್ದು, ಡಿಕೆಶಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.