ಬೆಂಗಳೂರು : ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮನೆಯಲ್ಲಿ ಕೋಟ್ಯಂತರ ರೂಪಾಯಿ ಹಣ ಲೋಕಾಯುಕ್ತ ಅಧಿಕಾರಿಗಳು ಪತ್ತೆ ಮಾಡಿರೋದು ಸದ್ಯ ಚರ್ಚೆಯಲ್ಲಿರುವ ವಿಷಯ … ಪುತ್ರನ ಕಚೇರಿ ಹಾಗೂ ಮನೆಯ ಮೇಲೆ ಲೋಕಾಯುಕ್ತ ದಾಳಿ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕೆಎಸ್‌ಡಿಎಲ್ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಶಾಸಕನ ಪುತ್ರ ದಾಳಿಯಲ್ಲಿ ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ ಸಹಜವಾಗಿ ಸರ್ಕಾರಕ್ಕೆ ಇದು ಮುಜುಗರ ತಂದೊಡ್ಡಿತ್ತು. ಈ ಹಿನ್ನೆಲೆಯಲ್ಲಿ ಕೆಎಸ್‌ಡಿಎಲ್ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಾಳ್ ವಿರೂಪಾಪಕ್ಷಪ್ಪ ಅವರಿಗೆ ಸಿಎಂ ಸೂಚನೆ ನೀಡಿದ್ದರು, ಅದರಂತೆ ರಾಜೀನಾಮೆ ಸಲ್ಲಿಸಿದ್ದರು.
ಈ ನಡುವೆ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಟ್ವೀಟ್ ಮಾಡಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ‘ಮಾಡಾಳರು ಮಾಡಿರುವ ಭ್ರಷ್ಟತೆ ಹಾಗೂ ಕಲಬೆರಕೆಯ ಕಾರಣ ಸರ್ಕಾರಿ ಸ್ವಾಮ್ಯದ ಉದ್ಯಮ ಮತ್ತು ಉತ್ಪನ್ನಗಳಲ್ಲಿ ನಂಬಿಕೆ ಮತ್ತು ಗೌರವ ಇರಿಸಿದ ನನ್ನಂಥವರು ಬಹುಕಾಲದಿಂದ ಬಳಸುತ್ತಿದ್ದ ಮೈಸೂರು ಸ್ಯಾಂಡಲ್ ಸೋಪ್ ಬಳಸಲೂ ಹಿಂಜರಿಯುವಂತಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಅದಕ್ಕೆ ನೆಟ್ಟಿಗರು ಹಲವು ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.