ಹೊಸದಿಲ್ಲಿ: ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡಿರುವ ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್ ರವರ ತಾಯಿಗೆ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಆರೋಗ್ಯವನ್ನು ವಿಚಾರಿಸಿದ್ದಾರೆ. ಡೆಹರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ರಿಷಬ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ರಿಷಭ್ ಪಂತ್ ತಲೆ, ಬೆನ್ನು ಹಾಗೂ ಕಾಲಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ರಿಷಭ್ ಪಂತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಿಷಭ್ ಪಂತ್ ಆರೋಗ್ಯ ವಿಚಾರಿಸಲು ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕ್ರಿಕೆಟಿಗನ ಕುಟುಂಬದ ಸದಸ್ಯರಿಗೆ ಕರೆ ಮಾಡಿ ಮಾತನಾಡಿದ್ದರು. ಕ್ರಿಕೆಟಿಗನ ಆರೋಗ್ಯ ವಿಚಾರಿಸಿದ ಪ್ರಧಾನ ಮಂತ್ರಿಗಳಿಗೆ ಧನ್ಯವಾದ ಎಂದು ಬಿಸಿಸಿಐ ಟ್ವೀಟ್ ಮಾಡಿದೆ. ರಿಷಭ್ ಪಂತ್ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೆ ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ವಿಶ್ವದಾದ್ಯಂತ ಕ್ರಿಕೆಟಿಗರು ಯುವ ಆಟಗಾರ ಬೇಗ ಗುಣಮುಖರಾಗಲಿ ಎಂದು ಶುಭಹಾರೈಸಿದ್ದರು.
ಇದರ ಬೆನ್ನಲ್ಲೆ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ತಾಯಿ ಕಳೆದುಕೊಂಡ ನೋವಿನಲ್ಲಿಯೇ ರಿಷಭ್ ಪಂತ್ ಅವರ ತಾಯಿಗೆ ಕರೆ ಮಾಡಿ ಆರೋಗ್ಯವನ್ನು ವಿಚಾರಿಸಿದ್ದಾರೆ. ಈ ವಿಷಯವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್‌ನಲ್ಲಿ ಬಹಿರಂಗಪಡಿಸಿದೆ.”ಅಪಘಾತದಲ್ಲಿ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ರಿಷಭ್ ಪಂತ್ ಅವರ ಜೊತೆ ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಇವೆ.
ನಾನು ಅವರ ಕುಟುಂಬ ಮತ್ತು ಚಿಕಿತ್ಸೆ ನೀಡುವ ವೈದ್ಯರೊಂದಿಗೆ ಮಾತನಾಡಿದ್ದೇನೆ. ರಿಷಭ್ ಪಂತ್ ಅವರ ಆರೋಗ್ಯ ಸ್ಥಿರವಾಗಿದ್ದು, ಸ್ಕ್ಯಾನ್ ಮಾಡಲಾಗುತ್ತಿದೆ. ನಾವು ಅವರ ಪ್ರಗತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಮತ್ತು ಅವರಿಗೆ ಅಗತ್ಯವಿರುವ ಎಲ್ಲಾ ಬೆಂಬಲವನ್ನು ಒದಗಿಸುತ್ತೇವೆ,” ಎಂದು ಬಿಸಿಸಿಐ ಕಾರ್ಯದರ್ಶಿ ಜಯ ಶಾ ಟ್ವೀಟ್ ಮಾಡಿದ್ದರು.