ಬೆಂಗಳೂರು: ಈ ಸಲದ ಪರೀಕ್ಷೆಗೆ ಆಗಮಿಸುವ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಕೊಠಡಿಯೊಳಗೆ ಬರುವಂತಿಲ್ಲ ಎಂದು ಸಚಿವ ಬಿ.ಸಿ ನಾಗೇಶ್ ತಿಳಿಸಿದರು.
ಮಾಧ್ಯಮಗಳ ಜೊತೆಗೆ ಮಾತನಾಡಿ, ಎಸ್ಎಸ್ಎಲ್ ಸಿ, ಪಿಯುಸಿ ಪರೀಕ್ಷೆಗೆ ಆಗಮಿಸಲಿರುವ ವಿದ್ಯಾರ್ಥಿನಿಯರು ಕಳೆದ ಬಾರಿಯಂತೆ ಈ ಬಾರಿಯೂ ಕಟ್ಟು ನಿಟ್ಟಾಗಿ ವಸ್ತ್ರ ಸಂಹಿತೆ ಪಾಲನೆ ಮಾಡಬೇಕು ಎಂದು ತಿಳಿಸಿದರು.
ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಬರಬೇಕು, ಯಾವುದೆ ಒತ್ತಡದಲ್ಲಿ ಪರೀಕ್ಷಾ ಕೇಂದ್ರಕ್ಕೆ ಬರಬೇಡಿ. ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಪರೀಕ್ಷೆ ಯಶಸ್ವಿಯಾಗಿ ನಡೆಸುತ್ತೇವೆ ಎಂದಿದ್ದಾರೆ.
ಕಳೆದ ವರ್ಷ ಸರ್ಕಾರ ಕೈಗೊಂಡ ನಿರ್ಧಾರಕ್ಕೆ ಈ ವರ್ಷವೂ ಬದ್ಧವಾಗಿದೆ. ಅಲ್ಲದೇ ವಸ್ತ್ರ ಸಂಹಿತೆ ವಿಚಾರದಲ್ಲಿ ಹೈಕೋರ್ಟ್ ಸ್ಪಷ್ಟ ಆದೇಶ ನೀಡಿದ್ದು ಅದರ ಪಾಲನೆ ಮಾಡಲಿದ್ದೇವೆ ಎಂದಿದ್ದಾರೆ. ಹಿಜಾಬ್ ಧರಿಸಿ ಬರಲು ಅನುಮತಿ ನೀಡುವಂತೆ ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪದವಿ ಪೂರ್ವ ಕಾಲೇಜುಗಳ ಕೆಲವು ವಿದ್ಯಾರ್ಥಿನಿಯರು ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದ್ದಾರೆ.
ಈ ಮನವಿಯನ್ನು ಪರಿಗಣಿಸದಂತೆ ಪ.ಪೂ. ಕಾಲೇಜುಗಳ ಪ್ರಾಂಶುಪಾಲರು ಮತ್ತು ಅಧಿಕಾರಿಗಳಿಗೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸ್ಪಷ್ಟ ಸೂಚನೆ ರವಾನಿಸಿದೆ.