Friday, September 29, 2023
spot_img
- Advertisement -spot_img

‘ಗೃಹಲಕ್ಷ್ಮಿ’ಜಾರಿಗೆ ಕ್ಷಣಗಣನೆ : ಸಾಂಸ್ಕೃತಿಕ ನಗರಿಯಲ್ಲಿ ಅದ್ದೂರಿ ಕಾರ್ಯಕ್ರಮ

ಮೈಸೂರು : ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ಇಂದು ನಗರದಲ್ಲಿ ಅಧಿಕೃತ ಚಾಲನೆ ಸಿಗಲಿದೆ.

ಇಂದು ಬೆಳಿಗ್ಗೆ 11 ಗಂಟೆಗೆ ನಗರದ ಮಹಾರಾಜ ಕಾಲೇಜಿನ ಮೈದಾನದಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಏಕಕಾಲಕ್ಕೆ ರಾಜ್ಯದ 1 ಕೋಟಿ 20 ಲಕ್ಷಕ್ಕೂ ಹೆಚ್ಚು ಮಹಿಳೆಯರ ಖಾತೆಗೆ 2 ಸಾವಿರ ರೂಪಾಯಿ ಹಣ ಜಮೆ ಆಗಲಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳ ಫಲಾನುಭವಿಗಳು ಖುದ್ದಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಗೃಹ ಸಚಿವ ಡಾ. ಪರಮೇಶ್ವರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರಿನಲ್ಲೂ ಕಾರ್ಯಕ್ರಮಕ್ಕೆ ಚಾಲನೆ : ಅತ್ತ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಯ ರಾಜ್ಯಮಟ್ಟದ ಕಾರ್ಯಕ್ರಮ ನಡೆದರೆ, ಅದೇ ಸಮಯಕ್ಕೆ ಇತ್ತ ಬಿಬಿಎಂಪಿ ಕೂಡ ಬೆಂಗಳೂರಿನಲ್ಲಿ ಯೋಜನೆಗೆ ಚಾಲನೆ ನೀಡಲಿದೆ. ನಗರದ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಕಾರ್ಯಕ್ರಮ ನಡೆಯಲಿದೆ.

ಸಂಚಾರ ನಿರ್ಬಂಧ : ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಹಿನ್ನೆಲೆ ಮಹಾರಾಜ ಕಾಲೇಜು ಮೈದಾನದ ಸುತ್ತ ಮುತ್ತಲಿನ ರಸ್ತೆಯಲ್ಲಿ ಎಲ್ಲಾ ಬಗೆಯ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಇಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ನಿರ್ಬಂಧ ಇರಲಿದೆ. ಈ ಸಂಬಂಧ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ. ಕೆಎಸ್ಆರ್ ಟಿಸಿ ಬಸ್ ಗಳು ಸೇರಿದಂತೆ ಇತರ ವಾಹನಗಳಿಗೆ ಪರ್ಯಾಯ ಮಾರ್ಗ ಸೂಚಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವವರ ವಾಹನಗಳಿಗೆ ವಿವಿಧ ಮೈದಾನಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles