ಕೊಪ್ಪಳ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರ ಬೇಕಾದರೂ ಸ್ಪರ್ಧಿಸಬಹುದು, ಹೀಗಾಗಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಎಲ್ಲಿ ಬೇಕಾದರೂ ಸ್ಪರ್ಧಿಸಲಿ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿಗೆ ರಾಜ್ಯದ 224 ಕ್ಷೇತ್ರ ಇದೆ. ಚುನಾವಣೆಯ ಹತ್ತಿರ ಬರಲಿ ಎಲ್ಲವೂ ಗೊತ್ತಾಗಲಿದೆ , ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಾರ್ಕಳದಿಂದ ಸ್ಪರ್ಧಿಸುತ್ತಿರುವುದು ಹಿಂದೂ ಪರ ರಾಜಕೀಯ ಪಕ್ಷಕ್ಕೆ ಹಿನ್ನೆಡೆಯಾಗಲಿದೆ ಎಂದರು.
ಕಾರ್ಕಳದಿಂದ ಪಕ್ಷೇತರವಾಗಿ ಪ್ರಮೋದ್ ಮುತಾಲಿಕ್ ಸ್ಪರ್ಧಿಸುತ್ತಿರುವ ಬಗ್ಗೆ ಪ್ರಕಟಣೆ ಹೊರಡಿಸಿದ್ದ ಸುನಿಲ್ ಕುಮಾರ್, ಈ ಹಿಂದೆ ಅನಂತಕುಮಾರ್ ಮತ್ತು ಪ್ರಹ್ಲಾದ್ ಜೋಶಿ ವಿರುದ್ಧವೂ ಪ್ರಮೋದ್ ಮುತಾಲಿಕ್ ಸ್ಪರ್ಧಿಸಿದ್ದರು. ಚುನಾವಣೆಯ ಫಲಿತಾಂಶ ಏನಾಯ್ತು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು.
ಕಾರ್ಕಳದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಡಿ ಎಂದು ಮುತಾಲಿಕ್ ಒತ್ತಾಯಿಸಿದ ಬಗ್ಗೆ ವಿಜಯಪುರದಲ್ಲಿ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಮ್ಮದು ರಾಷ್ಟ್ರೀಯ ಪಕ್ಷ. ಹೀಗಾಗಿ 224 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಹಾಕುತ್ತೇವೆ. ಉಡುಪಿ ಜಿಲ್ಲೆಯ ಕಾರ್ಕಳ ಕ್ಷೇತ್ರದಲ್ಲಿ ಸುನಿಲ್ ಕುಮಾರ್ ಬಾರಿ ಗೆದ್ದು ಸಚಿವರಾಗಿದ್ದಾರೆ. ಅದು ಅವರದ್ದೇ ಕ್ಷೇತ್ರ ಎಂದು ಹೇಳುವ ಮೂಲಕ ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸುನಿಲ್ ಕುಮಾರ್ ಕಾರ್ಕಳ ಕ್ಷೇತ್ರದಿಂದಲೇ ಕಣಕ್ಕಿಳಿಯುವ ಸುಳಿವು ನೀಡಿದ್ದರು.