ಬೆಳಗಾವಿ: ಫೆ.27ರಂದು ಬೆಳಗಾವಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದು, ಸೂಕ್ತ ಸಿದ್ದತೆಗೆ ಸೂಚಿಸಲಾಗಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಮೋದಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಮುಖ್ಯ ಕಾರ್ಯದರ್ಶಿಗಳು ಈ ಎರಡೂ ಜಿಲ್ಲೆಗಳ ಉನ್ನತ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿ, ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಅಂತಿಮ ಸಮಯದಲ್ಲಿ ಕೆಲವು ಬದಲಾವಣೆಗಳಾದರೂ ಇದನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಸಿದ್ಥತೆಗಳನ್ನು ಮಾಡಿಕೊಳ್ಳಬೇಕು. ತುರ್ತು ವೈದ್ಯಕೀಯ ಸೌಲಭ್ಯಗಳು, ಭದ್ರತೆ ಮತ್ತು ಸಂಚಾರ ನಿರ್ವಹಣೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಪ್ರಧಾನಿ ಕಾರ್ಯಾಲಯದ ನಿರ್ದೇಶನದಂತೆ ಭದ್ರತಾ ವ್ಯವಸ್ಥೆ, ಶಿಷ್ಟಾಚಾರ, ವೇದಿಕೆ ನಿರ್ಮಾಣ ಸೇರಿದಂತೆ ಪ್ರತಿಯೊಂದು ಕಾಮಗಾರಿಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು , ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದರು.