ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸಾರಿಗೆ ಸಂಘಟನೆಗಳ ಒಕ್ಕೂಟ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಹಲವು ಸಂಘಟನೆಗಳ ಕಾರ್ಯಕರ್ತರು ಬೆಂಗಳೂರಿಗೆ ಆಗಮಿಸಿದ್ದಾರೆ.
ನಗರದ ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಿಂದ (ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣ) ಫ್ರೀಡಂ ಪಾರ್ಕ್‌ವರೆಗೆ ಬೃಹತ್ ಜಾಥಾ ಆರಂಭವಾಗಿದ್ದು, ಸಾವಿರಾರು ಜನ ಖಾಸಗಿ ವಾಹನಗಳ ಮಾಲೀಕರು, ಚಾಲಕರು ಹಾಗೂ ಆಟೋ ಚಾಲಕರು ಭಾಗವಹಿಸಿದ್ದಾರೆ. ಸರ್ಕಾರದ ವಿರುದ್ದ ಘೋಷಣೆ ಕೂಗುತ್ತ ಪ್ರತಿಭಟನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ; ಖಾಸಗಿ ಸಾರಿಗೆ ಬಂದ್: ವಿಮಾನ ನಿಲ್ದಾಣದಿಂದ ಹೆಚ್ಚುವರಿ ಬಸ್ ಸಂಚಾರ
ಪ್ರತಿಭಟನೆಯಲ್ಲಿ ಭಾಗಿಯಾದ ಸಾವಿರಾರು ಜನ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ತಮ್ಮ ವಾಹನಗಳು, ಆಟೋ ಹಾಗೂ ಗೂಡ್ಸ್ ಆಟೋಗಳ ಜತೆಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಪ್ರತಿಭಟನಾನಿರತರನ್ನು ನಿಯಂತ್ರಿಸಲು ಪೋಲಿಸರು ಹರಸಾಹಸ ಪಡುತ್ತಿದ್ದಾರೆ.
ಮೆಜೆಸ್ಟಿಕ್ ಬಳಿ ಇರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಬಳಿ ಇಂದು ಬೆಳಗ್ಗೆಯಿಂದಲೇ ಸಾವಿರಾರು ಜನ ಪ್ರತಿಭಟಕಾರರು ಜಮಾಯಿಸಿದ್ದರು. ಫ್ರೀಡಂಪಾರ್ಕ್ ವರೆಗೆ ಜಾಥ ನಡೆಸಲು ಸಾವಿರಾರು ಜನ ಸೇರಿದ್ದರಿಂದ ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಉಂಟಾಯಿತು. ಈ ಹಿನ್ನಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು.


ಜಯ ಕರ್ನಾಟಕ ಜಿಲ್ಲಾಧ್ಯಕ್ಷ ಆನಂದಗೌಡ ಮಾತನಾಡಿ,’ಸರ್ಕಾರಕ್ಕೆ ಹಲವಾರು ಬಾರಿ ಮನವಿ ಮಾಡಿದ್ದೆವೆ. ಆದರೆ, ಕಾಂಗ್ರೆಸ್ ಸರ್ಕಾರಕ್ಕೆ ಆತ್ಮಿಯವಾಗಿರುವವರನ್ನು ಮಾತ್ರ ಸಭೆಗೆ ಆಹ್ವಾನಿಸಿದ್ದರು. ನಮ್ಮ ಬಂದ್ ಗೆ 36 ಸಂಘಟನೆಗಳು ಬೆಂಬಲ ಸೂಚಿಸಿವೆ. ಸಾರಿಗೆ ಸಚಿವರು ಕೆಲವರನ್ನು ಮಾತ್ರ ಸಭೆಗೆ ಕರೆದಿದ್ದರು. 36 ಒಕ್ಕೂಟಗಳು ಒಟ್ಟಿಗೆ ಸಭೆಗೆ ಬಂದರೆ ಸಾರಿಗೆ ಭವನದಲ್ಲಿ ಕೂರಲು ಸ್ಥಳಾವಕಾಶ ಇಲ್ಲ ಎನ್ನುತ್ತಾರೆ. ಮುಖ್ಯಮಂತ್ರಿಗಳಿಗೆ ಹಾಗೂ ಸಾರಿಗೆ ಸಚಿವರಿಗೆ ನಾಚಿಕೆಯಾಗಬೇಕು’ ಎಂದು ವಾಗ್ದಾಳಿ ನಡೆಸಿದರು.
‘ಇಂದು ನಡೆಯುತ್ತಿರುವುದು ಒಂದು ದಿನದ ಹೋರಾಟವಲ್ಲ ಇಂದು ಶಾಂತಿಯುತವಾಗಿ ಹೋರಾಟ ನಡೆಸಿ ಸರ್ಕಾರಕ್ಕೆ ಒಮ್ಮೆ ಬಿಸಿ ಮುಟ್ಟಿಸುತ್ತೇವೆ. ನಮ್ಮ ಮನವಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ 3 ದಿನಗಳ ಹೋರಾಟ ಮಾಡುತ್ತೆವೆ. 3 ದಿನಗಳ ಹೋರಾಟ ಉಗ್ರವಾಗಿರುತ್ತದೆ’ ಎಂದು ಎಚ್ಚರಿಕೆ ನೀಡಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.