ಬೆಂಗಳೂರು : ಸನಾತನ ಧರ್ಮದ ಕುರಿತು ಹೇಳಿಕೆ ನೀಡಿದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಅವರ ಹೇಳಿಕೆಯನ್ನು ಬೆಂಬಲಿಸಿದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪದ ಮೇಲೆ ಉದಯನಿಧಿ ಸ್ಟಾಲಿನ್ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದ ರಾಂಪುರದ ಸಿವಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಇದನ್ನೂ ಓದಿ : ಸಮಾನತೆ ಇಲ್ಲದ ಮೇಲೆ ಅದು ಧರ್ಮವೇ ಅಲ್ಲ: ಪ್ರಿಯಾಂಕ್ ಖರ್ಗೆ
ವಕೀಲರಾದ ಹರ್ಷ ಗುಪ್ತ ಮತ್ತು ರಾಮ್ ಸಿಂಗ್ ಲೋಧಿ ಎಂಬವರ ದೂರು ಆಧರಿಸಿ ಐಪಿಸಿ ಸೆಕ್ಷನ್ 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಮತ್ತು 153 ಎ (ವಿವಿಧ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
‘ಸನಾತನ ನಿರ್ಮೂಲನೆ’ ವಿಷಯದ ಕುರಿತು ತಮಿಳುನಾಡು ಪ್ರಗತಿಪರ ಲೇಖಕರ ಕಲಾವಿದರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಚಿವ ಉದಯನಿಧಿ ಸ್ಟಾಲಿನ್, ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೊನಾವನ್ನು ವಿರೋಧಿಸಲು ಸಾಧ್ಯವಿಲ್ಲ. ಇದನ್ನು ನಿರ್ಮೂಲನೆ ಮಾಡಬೇಕು. ಸನಾತನವನ್ನು ವಿರೋಧಿಸುವ ಬದಲು ಅದನ್ನು ನಿರ್ಮೂಲನೆ ಮಾಡಬೇಕು’ ಎಂದಿದ್ದರು. ಈ ಹೇಳಿಕೆ ವಿವಾದದ ಕಿಡಿ ಹೊತ್ತಿಸಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.