ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಇಹಲೋಕ ತ್ಯಜಿಸಿದ್ದಾರೆ. ಆರ್.ಧ್ರುವನಾರಾಯಣರಿಗೆ ಎದೆ ನೋವು ಕಾಣಿಸಿಕೊಂಡಿದೆ. ಕಾರ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಕೊನೆಯುಸಿರೆಳೆದಿದ್ದಾರೆ. ಆರ್ ಧ್ರುವನಾರಾಯಣ್ ಅಗಲಿಕೆಗೆ ರಾಹುಲ್ ನಾಯಕ ರಾಹುಲ್ ಗಾಂಧಿ, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಬಸವರಾಜ ಬೊಮ್ಮಾಯಿ, ಡಿಕೆಶಿವಕುಮಾರ್, ಹೆಚ್.ಡಿ. ಕುಮಾರಸ್ವಾಮಿ ಸೇರಿ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮೈಸೂರಿನ ಡಿಆರ್ಎಂಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ. ಆರ್.ಧ್ರುವನಾರಾಯಣ ತೀವ್ರ ರಕ್ತಸ್ರಾವ ಆಗಿ ಮೃತಪಟ್ಟಿದ್ದಾರೆ ಎಂದು ಧ್ರುವನಾರಾಯಣಗೆ ಚಿಕಿತ್ಸೆ ನೀಡಿದ ವೈದ್ಯ ಮಂಜುನಾಥ್ ಹೇಳಿದ್ದಾರೆ. ನಾವು ನೋಡಿದಾಗ ಧ್ರುವನಾರಾಯಣ ಕೋಮಾ ಸ್ಥಿತಿಯಲ್ಲಿದ್ದರು ಎಂದು ತಿಳಿಸಿದ್ದಾರೆ.
1961 ಜುಲೈ 31ರಂದು ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿ ಗ್ರಾಮದಲ್ಲಿ ಜನನಿಸಿದ್ದ ಧ್ರುವನಾರಾಯಣ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಬಿಎಸ್ಸಿ ಕೃಷಿ ಪದವಿ ಪಡೆದುಕೊಂಡಿದ್ದರು. 1983ರಲ್ಲಿ ಕಾಂಗ್ರೆಸ್ ಪಕ್ಷ ಸೇರುವ ಮೂಲಕ ರಾಜಕೀಯ ಪ್ರವೇಶ ಮಾಡಿದ್ದ ಇವರು 1986ರಲ್ಲಿ ಎನ್ಎಸ್ಯುಐ ಬೆಂಗಳೂರು ಘಟಕದ ಅಧ್ಯಕ್ಷರಾಗಿದ್ದರು. ಚಾರಾಜನಗರ ಲೋಕಸಭಾ ಕ್ಷೇತ್ರದಿಂದ 2 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಹಾಗೇ ಕೊಳ್ಳೇಗಾಲ ಕ್ಷೇತ್ರದಿಂದ 1 ಬಾರಿ, ಸಂತೇಮರಹಳ್ಳಿ ಕ್ಷೇತ್ರದಿಂದ 1 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಬಾರಿ ನಂಜನಗೂಡು ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದರು.2004ರಲ್ಲಿ ಸಂತೇಮರಹಳ್ಳಿ ವಿಧಾನ ಸಭಾ ಕ್ಷೇತ್ರ ಹಾಗೂ 2008ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಿಂದ ಶಾಸಕರಾಗಿ ಜಯ ಗಳಿಸಿದ್ದರು.