Thursday, June 8, 2023
spot_img
- Advertisement -spot_img

ಸಂಸದ ಸ್ಥಾನದಿಂದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅನರ್ಹ

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರನ್ನು ಕೇರಳದ ವಯನಾಡ್‌ ಸಂಸದ ಸ್ಥಾನದಿಂದ ಅನರ್ಹ ಮಾಡಲಾಗಿದೆ. ಮಾನನಷ್ಟ ಪ್ರಕರಣ ಸಂಬಂಧ ಸೂರತ್‌ ಕೋರ್ಟ್‌ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ಲೋಕಸಭೆ ಸಚಿವಾಲಯದ ಕಾರ್ಯದರ್ಶಿ ರಾಹುಲ್‌ ಗಾಂಧಿಯವರನ್ನು ಅನರ್ಹಗೊಳಿಸಿ ಆದೇಶಿಸಿದ್ದಾರೆ.

ಇದರಿಂದ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಅವರಿಗೆ ಭಾರಿ ಹಿನ್ನಡೆ ಉಂಟಾಗಿದೆ. ಜನಪ್ರತಿನಿಧಿ ಕಾಯ್ದೆಯ ನಿಯಮದಂತೆ ರಾಹುಲ್ ಗಾಂಧಿಯವರನ್ನು ಅಮಾನತು ಮಾಡಲಾಗಿದೆ ಎಂದು ಲೋಕಸಭೆ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.

ಆದೇಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು, ಬೆಂಬಲಿಗರು ಪ್ರತಿಭಟನೆಯ ಹಾದಿ ತುಳಿದಿದ್ದಾರೆ, ಅಷ್ಟೇ ಅಲ್ಲದೇ ಮಲ್ಲಿಕಾರ್ಜುನ ಖರ್ಗೆ 5 ಘಂಟೆಗೆ ತುರ್ತು ಸಭೆ ಕರೆದಿದ್ದಾರೆ ಎಂದು ತಿಳಿದು ಬಂದಿದೆ.

ಶಾಸಕರು ಅಥವಾ ಸಂಸದರು ಯಾವುದೇ ಅಪರಾಧ ಪ್ರಕರಣಗಳಲ್ಲಿ ಎರಡು ವರ್ಷ ಅಥವಾ ಎರಡು ವರ್ಷಕ್ಕಿಂತ ಹೆಚ್ಚು ಶಿಕ್ಷೆಗೆ ಒಳಗಾಗಿದ್ದರೆ ಅವರನ್ನು ಶಾಸಕ/ ಸಂಸದ ಸ್ಥಾನದಿಂದ ಅನರ್ಹಗೊಳಿಸಬಹುದು.

ರಾಹುಲ್‌ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆಯಾದ ಕಾರಣ ಈಗ ಈ ಕಾಯ್ದೆಯ ಅಡಿ ಅನರ್ಹ ಮಾಡಲಾಗಿದೆ. 2019ರ ಲೋಕಸಭಾ ಚುನಾವಣೆಯ ವೇಳೆ ನರೇಂದ್ರ ಮೋದಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದೆ.

ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶ ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು. ಈ ಹೇಳಿಕೆಯನ್ನು ಆಧರಿಸಿ ಮಾಜಿ ಸಚಿವ ಪೂರ್ಣೇಶ್ ಮೋದಿ ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು.

Related Articles

- Advertisement -spot_img

Latest Articles