ನವದೆಹಲಿ: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ನಾಳೆ ಸೂರತ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.
2019ರ ಮಾನಹಾನಿ ಪ್ರಕರಣದಲ್ಲಿ ಇತ್ತೀಚೆಗೆ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ, ಸಂಸತ್ ಸದಸ್ಯತ್ವದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೂರತ್‌ನ ಸೆಷನ್ಸ್ ನ್ಯಾಯಾಲಯದಲ್ಲಿ ಸೋಮವಾರ ತಮ್ಮ ಶಿಕ್ಷೆ ವಿರುದ್ಧ ಮೇಲ್ಮನವಿ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೋದಿ ಉಪನಾಮೆ ವಿಚಾರವಾಗಿ ನೀಡಿದ್ದ ವಿವಾದಿತ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವ್ಯಕ್ತಿಯೊಬ್ಬರು ಸೂರತ್ ಕೋರ್ಟ್ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ರಾಹುಲ್ ಗಾಂಧಿ ಅವರಿಗೆ ಸೂರತ್ ಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸಕಲ ನೆರವು ನೀಡಲಾಗುವುದು. ಕಾನೂನು ತಂಡ ಕಾರ್ಯ ನಿರ್ವ ಹಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇತ್ತೀಚೆಗೆ ಹೇಳಿದ್ದರು.
ಪ್ರಕರಣದಲ್ಲಿ ರಾಹುಲ್ ಗಾಂಧಿಯವರನ್ನು ದೋಷಿ ಎಂದು ಕೋರ್ಟ್ ತೀರ್ಪು ನೀಡಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಸಂಸದ ಸ್ಥಾನದಿಂದ ಅನರ್ಹವಾದ ಬಳಿಕ ರಾಹುಲ್ ಗಾಂಧಿ ‘ನನ್ನ ಹೆಸರು ರಾಹುಲ್ ಗಾಂಧಿ, ವೀರ್ ಸಾವರ್ಕರ್‌ರಂತೆ ನಾನು ಕ್ಷಮೆ ಕೇಳುವುದಿಲ್ಲ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ವಿರುದ್ಧ ಭಾರಿ ಟೀಕೆಯೂ ವ್ಯಕ್ತವಾಗಿತ್ತು.