ಬೆಳಗಾವಿ : ರಾಹುಲ್ ಗಾಂಧಿ ಬೆಳಗಾವಿಯಲ್ಲಿ ಹಮ್ಮಿಕೊಂಡಿರುವ ಯುವ ಕ್ರಾಂತಿ ಸಮಾವೇಶದಲ್ಲಿ ಭಾಗವಹಿಸಲಿದ್ದು, ಇಂದು ಆಗಮಿಸಲಿದ್ದಾರೆ.
ಸಿಪಿಇಡಿ ಮೈದಾನದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿ ಗಣ್ಯರು ಭಾಗವಹಿಸಲಿದ್ದಾರೆ. ಅಷ್ಟೇ ಅಲ್ಲದೇ ಸಮಾವೇಶ ಉದ್ದೇಶಿಸಿ ರಾಹುಲ್ ಗಾಂಧಿ ಭಾಷಣ ಮಾಡಲಿದ್ದಾರೆ.
ಏಪ್ರಿಲ್ , ಮೇ ನಲ್ಲಿ ನಡೆಯಲಿರುವ ವಿಧಾನ ಸಭೆ ಎಲೆಕ್ಷನ್ ನಿಟ್ಟಿನಲ್ಲಿ ಅತ್ಯಂತ ಹೆಚ್ಚು 18 ಕ್ಷೇತ್ರಗಳನ್ನು ಒಳಗೊಂಡಿರುವ ಬೆಳಗಾವಿಯಲ್ಲಿ ಯುವ ಕ್ರಾಂತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಅಷ್ಟೇ ಅಲ್ಲದೇ ಕಾಂಗ್ರೆಸ್ ಹೆಚ್ಚು ಸ್ಥಾನ ಪಡೆಯಲೇಬೇಕು ಎಂದು ಪಣ ತೊಟ್ಟಿದೆ.
ಪಕ್ಷದ ಮೂಲಗಳ ಪ್ರಕಾರ, ಕಾಂಗ್ರೆಸ್ ಈಗಾಗಲೇ ಮೂರು ಚುನಾವಣಾ ಆಶ್ವಾಸನೆಗಳನ್ನು ಘೋಷಿಸಿದೆ. ಸಮಾವೇಶದಲ್ಲಿ ಭಾಗವಹಿಸುವ ರಾಹುಲ್ ಗಾಂಧಿ ವಿಧಾನಸಭೆ ಚುನಾವಣೆಯ ನಾಲ್ಕನೇ ಆಶ್ವಾಸನೆ ಘೋಷಿಸಲಿದ್ದಾರೆ. ಯುವಜನತೆ ಗಮನದಲ್ಲಿಟ್ಟುಕೊಂಡೇ ಈ ಭರವಸೆ ರೂಪಿಸಲಾಗಿದೆ ಎಂದು ತಿಳಿದು ಬಂದಿದೆ.
125 ಮಂದಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಲಾಗುವುದು, ಬಹುತೇಕ ಸಮೀಕ್ಷೆಗಳ ಪ್ರಕಾರ 140 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಲೀಂ ಅಹ್ಮದ್ ಹೇಳಿದ್ದರು. ಯುವಕ್ರಾಂತಿ ಸಮಾವೇಶದ ಬಳಿಕ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದರು.
ಚುನಾವಣೆಗೆ ಸ್ಪರ್ಧಿಸುವ 125 ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಅಂತಿಮಗೊಳಿಸಿದ್ದು, ಯುಗಾದಿ ಹಬ್ಬದಂದು ಬಿಡುಗಡೆಗೊಳಿಸಲು ನಿರ್ಧರಿಸಿದೆ ಎಂದು ರಾಹುಲ್ ಗಾಂಧಿ ಆಗಮನದ ಹಿನ್ನೆಲೆ ಡಿಕೆಶಿವಕುಮಾರ್ ಮಾಧ್ಯಮದವರೊಂದಿಗೆ ಹಂಚಿಕೊಂಡರು.