ಬೆಳಗಾವಿ/ಬೆಂಗಳೂರು: ಮಂಗಳವಾರ ಮುಖ್ಯಮಂತ್ರಿ ಬೊಮ್ಮಾಯಿ ನನಗೆ ಕರೆ ಮಾಡಿ ರಮೇಶ ಜಾರಕಿಹೊಳಿ ಜೊತೆ ಆಗಮಿಸುವಂತೆ ತಿಳಿಸಿದ್ದರು. ಅದರಂತೆ ಬುಧವಾರ ರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ರಮೇಶ ಜಾರಕಿಹೊಳಿ ಜೊತೆ ಆಗಮಿಸಿ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿದ್ದೇನೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಮುಖ್ಯಮಂತ್ರಿಗಳು ಮುಂದಿನ ವಾರ ಸಂಪುಟದ ಆಕಾಂಕ್ಷಿಗಳ ಪಟ್ಟಿಯೊಂದಿಗೆ ದೆಹಲಿಗೆ ಬರುವಂತೆ ಸೂಚಿಸಿದ್ದಾರೆ, ಮುಖ್ಯಮಂತ್ರಿಗಳ ಮೇಲೆ ನನಗೆ ಭರವಸೆ ಇದೆ. ಹೀಗಾಗಿ, ನನಗೆ ಹಾಗೂ ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತ. ಬೇರೆಯವರ ಬಗ್ಗೆ ನನಗೆ ಗೊತ್ತಿಲ್ಲ. ಈ ಹಿನ್ನೆಲೆಯಲ್ಲಿ ಗುರುವಾರದಿಂದ ನಾವು ಸದನಕ್ಕೆ ಹಾಜರಾಗುತ್ತಿದ್ದೇವೆ ಎಂದರು.
ಇಬ್ಬರನ್ನೂ ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಹೈಕಮಾಂಡ್ ಜೊತೆ ಮಾತನಾಡಿದ್ದೇನೆ. ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆ ಈಗಾಗಲೇ ದೊರೆತಿದೆ. ಆದರೂ, ಮತ್ತೊಮ್ಮೆ ಇದನ್ನು ದೃಢಪಡಿಸಿಕೊಳ್ಳುವ ಸಲುವಾಗಿ ಈ ಸದನ ಮುಗಿಯುವುದರೊಳಗೆ, ಬಹುಶಃ ಸೋಮವಾರ ಮತ್ತೊಮ್ಮೆ ದೆಹಲಿಗೆ ತೆರಳಿ ವರಿಷ್ಠರ ಜೊತೆ ಮಾತುಕತೆ ನಡೆಸುತ್ತೇನೆ ಎಂದು ಬೊಮ್ಮಾಯಿ ತಿಳಿಸಿದ್ದ್ದಾದರು.
ಸಚಿವ ಸಂಪುಟದಲ್ಲಿ ಮತ್ತೆ ಸ್ಥಾನ ಸಿಗದ್ದಕ್ಕೆ ತೀವ್ರ ಬೇಸರಗೊಂಡಿದ್ದ ಹಿರಿಯ ಶಾಸಕರಾದ ಕೆ.ಎಸ್.ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದ್ದು, ಸಂಧಾನ ಫಲಪ್ರದವಾಗಿದೆ. ಉಭಯ ನಾಯಕರ ಸಮ್ಮುಖದಲ್ಲೇ ಮುಖ್ಯಮಂತ್ರಿ ಬೊಮ್ಮಾಯಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.