ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಂತಿಮ ತೀರ್ಮಾನ ಆಗಿಲ್ಲ ಎಂದು ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ ತಿಳಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಇಬ್ಬರೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. ಮುಖ್ಯಮಂತ್ರಿ ಆಯ್ಕೆ ಬಗ್ಗೆ ಎಐಸಿಸಿ ಅಧ್ಯಕ್ಷ ಖರ್ಗೆ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
ಸಿದ್ದರಾಮಯ್ಯರವರೇ ಮುಂದಿನ ಸಿಎಂ ಎಂದು ಅಭಿಮಾನಿಗಳು ಒಂದು ಕಡೆ ಸಂಭ್ರಮಾಚರಿಸ್ತಿದ್ರೆ, ಇನ್ನೊಂದು ಕಡೆ ಡಿಕೆಶಿ ನನಗೆ ಬೇರೆ ಯಾವುದೇ ಹುದ್ದೆ ಬೇಡ, ಕೊಟ್ಟರೆ ಸಿಎಂ ಹುದ್ದೆ ಬೇಕು ಎಂದಿದ್ದಾರೆ. ನಾನು ಅಥವಾ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲಿ ಎಂದು ಹಟಹಿಡಿದಿದ್ದಾರೆ. ರಾಜ್ಯದಲ್ಲಿ ದಲಿತರನ್ನು ಸಿಎಂ ಮಾಡಿ ಎಂದು ಡಿಕೆಶಿ ಪಟ್ಟು ಹಿಡಿದಿದ್ದಾರೆ. ಹೈಕಮಾಂಡ್ ಎಷ್ಟೇ ಮನವರಿಕೆ ಮಾಡಿದರೂ ತಮ್ಮ ನಿರ್ಧಾರದಿಂದ ಹಿಂದೆ ಸರಿಯದ ಡಿಕೆಶಿ ದೆಹಲಿಯಲ್ಲೇ ಠಿಕಾಣಿ ಹೂಡಲು ನಿರ್ಧರಿಸಿದ್ದಾರೆ, ಜೊತೆಗೆ ಸಿಎಂ ಪ್ರಮಾಣ ವಚನ ಸ್ವೀಕಾರಕ್ಕೆ ನಡೆಯಬೇಕಿದ್ದ ಸಿದ್ದತೆ ಸ್ಥಗಿತಗೊಂಡಿದೆ.
ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, 135 ಸ್ಥಾನ ಗಳಿಸುವ ಮೂಲಕ ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದೆ. ಆದರೆ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸಿಎಂ ಕುರ್ಚಿಯ ಫೈಟ್ ನಿಂದ ಒಮ್ಮತಕ್ಕೆ ಬರುವುದು ಸಾಧ್ಯವಾಗಲಿಲ್ಲ.