ಹುಬ್ಬಳ್ಳಿ : ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮ ಕೇಂದ್ರ ಸರ್ಕಾರದ ಕಾರ್ಯಕ್ರಮವಾಗಿದೆ. ರಾಜ್ಯ ಸರ್ಕಾರದ ಸಹಕಾರದೊಂದಿಗೆ ನಡೆಯುತ್ತಿದೆ. ಈಗಾಗಲೇ ಕಾರ್ಯಕ್ರಮದ ಸಿದ್ಧತೆ ಭರದಿಂದ ಸಾಗಿದ್ದು, ಜಿಲ್ಲಾಡಳಿತ ಉತ್ತಮ ಕಾರ್ಯ ನಿರ್ವಹಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಹುಬ್ಬಳ್ಳಿಯಲ್ಲಿ 2018ರ ನಂತರ ನಡೆಯುತ್ತಿರುವ ನರೇಂದ್ರ ಮೋದಿಯವರ ಬೃಹತ್ ಕಾರ್ಯಕ್ರಮ ಇದಾಗಿದ್ದು, ಇದು ಯಾವುದೇ ರಾಜಕೀಯ ಪಕ್ಷದ ಕಾರ್ಯಕ್ರಮವಲ್ಲ. ಹೀಗಾಗಿ ಕಾಂಗ್ರೆಸ್ ಇದನ್ನು ವಿರೋಧಿಸುತ್ತಿರುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು.
ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಸುಮಾರು 25-30 ಸಾವಿರ ಯುವಕರು ಭಾಗಿಯಾಗಲಿದ್ದಾರೆ. ಅಲ್ಲದೆ ದೇಶದ ವಿವಿಧ ರಾಜ್ಯಗಳಿಂದ 8 ಸಾವಿರ ಯುವಕರು ಆಗಮಿಸಲಿದ್ದಾರೆ. ಅವರಿಗೆ ಕಾರ್ಯಕ್ರಮದಲ್ಲಿ ಕುಳಿತುಕೊಳ್ಳಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು. ಹುಬ್ಬಳ್ಳಿಯಲ್ಲಿ 2018ರ ನಂತರ ನಡೆಯುತ್ತಿರುವ ನರೇಂದ್ರ ಮೋದಿಯವರ ಬೃಹತ್ ಕಾರ್ಯಕ್ರಮ ಇದಾಗಿದೆ ಎಂದು ತಿಳಿಸಿದ್ದಾರೆ.
ಹು-ಧಾ ಅವಳಿನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಅಧಿವೇಶನದಲ್ಲಿ ಧ್ವನಿ ಎತ್ತಿದ್ದೇನೆ. ಅಲ್ಲದೇ ಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವರಿಗೆ ಪತ್ರ ಬರೆದಿದ್ದೇನೆ. ಸಭೆ ನಡೆಸಿ ಸಮಸ್ಯೆ ಪರಿಹರಿಸಲು ಮುಂದಾಗುವುದಾಗಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿ-ಧಾರವಾಡಕ್ಕೆ ಬರುತ್ತಿರುವ ಹಿನ್ನೆಲೆ ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಗೋ-ಬ್ಯಾಕ್ ಮೋದಿ ಅಭಿಯಾನ ಆರಂಭಿಸಿದೆ. ಇದಕ್ಕೆ ಯಾವುದೇ ಅರ್ಥವಿಲ್ಲ. ಮುಂದಿನ 2-3 ತಿಂಗಳಲ್ಲಿ ಚುನಾವಣೆ ಬರುವ ಹಿನ್ನೆಲೆಯಲ್ಲಿ ಅವರಿಗೆ ಮಾಡಲು ಏನೂ ಕೆಲಸವಿಲ್ಲದೇ ಈ ರೀತಿಯಾಗಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.