ಹೈದ್ರಾಬಾದ : ಸೋಮವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಹೈದರಾಬಾದ್‌ನಲ್ಲಿ ಅದ್ಧೂರಿಯಾಗಿ ಮೆಗಾ ರ‍್ಯಾಲಿ ಹಮ್ಮಿಕೊಂಡಿದ್ದೇವೆ. ಆ ದಿನವೇ ನಾವು ತೆಲಂಗಾಣ ಜನತೆಗೆ ಆರು ಭರವಸೆಗಳನ್ನು ಘೋಷಿಸುತ್ತೇವೆ. ಚುನಾವಣೆ ಬಂದಾಗ ಪಕ್ಷವು ಜನರಿಂದ ಸ್ಪಷ್ಟ ಬಹುಮತವನ್ನು ಪಡೆಯುತ್ತದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಕಾರ್ಯತಂತ್ರಗಳನ್ನು ರೂಪಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ)ಯ ಸಭೆಯು ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿದೆ. ವಿವಿಧ ರಾಜ್ಯಗಳ ವಿಧಾನಸಭೆಯ ಚುನಾವಣೆಯ ಕುರಿತು ಸಭೆಯಲ್ಲಿ ಚರ್ಚೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ : ಬರೊಬ್ಬರಿ ₹ 21 ಲಕ್ಷ ಮಕ್ಮಲ್ ಟೋಪಿ..!
‘ಭಾರತ್ ಜೋಡೋ ಯಾತ್ರೆ’ ಭಾಗ 2ನ್ನು ನಡೆಸುವ ಬಗ್ಗೆಯೂ ಚರ್ಚೆಯಾಗಬಹುದು. ಸಿಡಬ್ಲ್ಯುಸಿ ಸಭೆಯು ತೆಲಂಗಾಣ ರಾಜಕೀಯಕ್ಕೆ “ಪರಿವರ್ತನೆ” ನೀಡುವ ಹೊಸ ಇತಿಹಾಸಕ್ಕೆ ನಾಂದಿಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್‌ಎಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಮೋದಿ ಸರ್ಕಾರ ಮತ್ತು ಕೆಸಿಆರ್ ಸರ್ಕಾರ ಒಂದೇ ನಾಣ್ಯದ ಎರಡು ಮುಖಗಳು ಎಂಬುದನ್ನು ಅರ್ಥಮಾಡಿಕೊಳ್ಳಿ, ಅವರ ನಡುವೆ ಯಾವುದೇ ವ್ಯತ್ಯಾಸವಿಲ್ಲ, ದೆಹಲಿಯಲ್ಲಿ ನರೇಂದ್ರ ಮೋದಿ ಇದ್ದಾರೆ. ಮತ್ತು ಹೈದರಾಬಾದ್‌ನಲ್ಲಿ ಕೆಸಿಆರ್ ಇದ್ದಾರೆ ಎಂದು ಕಿಡಿ ಕಾರಿದ್ದಾರೆ.
ತೆಲಂಗಾಣದಲ್ಲಿ ಬಿಜೆಪಿ, ಆಡಳಿತಾರೂಢ ಬಿಆರ್‌ಎಸ್ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಡಲಿದೆ ಎಂದು ಅವರು ಹೇಳಿದ್ದಾರೆ.
ಚುನಾವಣಾ ಪ್ರಚಾರಕ್ಕೆ ಬಲ..
ಮೂರು ದಿನಗಳ ಈ ಮಹತ್ವದ ಸಭೆಯು ತೆಲಂಗಾಣದಲ್ಲಿ ಚುನಾವಣಾ ಪ್ರಚಾರವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ಈ ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿರುವ ರಾಜ್ಯಗಳಾದ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಹಾಗೂ ಮಿಜೋರಾಂಗಳಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವ ವಿಶ್ವಾಸವಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಹೇಳಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಭಾಗಿಯಾಗಲಿದ್ದಾರೆ ಎಂದು ವೇಣುಗೋಪಾಲ್ ತಿಳಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಪಕ್ಷದ ಮುಖ್ಯಸ್ಥರಾದ 10 ತಿಂಗಳ ನಂತರ ಈ ಸಮಿತಿಯನ್ನು ರಚಿಸಲಾಗಿದೆ. 39 ಸಾಮಾನ್ಯ ಸದಸ್ಯರು, 32 ಖಾಯಂ ಆಹ್ವಾನಿತರು ಮತ್ತು 13 ವಿಶೇಷ ಆಹ್ವಾನಿತರು ಈ ಸಮಿತಿಯಲ್ಲಿ ಇರಲಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.