ರಾಮನಗರ: ಕ್ಷೇತ್ರದ ಮತದಾರರ ಆಶೀರ್ವಾದದಿಂದ ರಾಜ್ಯದ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದರೂ ಹೆಚ್ ಡಿ ಕುಮಾರಸ್ವಾಮಿಯವರ ಕುಟುಂಬ ಜನರ ಕಷ್ಟಕ್ಕೆ ಸ್ಪಂದಿಸಿಲ್ಲ ಎಂದು ನಗರಸಭೆ ಮಾಜಿ ಅಧ್ಯಕ್ಷರು ಆದ ಹಾಲಿ ಸದಸ್ಯ ಕೆ.ಶೇಷಾದ್ರಿ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಡೀ ರಾಜ್ಯದ ಜನರಿಗೆ ಸುಳ್ಳು ಹೇಳಿಕೊಂಡು ಹೋಗುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಮೊದಲು ಸುಳ್ಳಿನ ಆಶ್ವಾಸನೆ ಕೊಡುವುದನ್ನು ಬಿಡಬೇಕು. ಇವರ ವೈಫಲ್ಯಗಳನ್ನು ತಿಳಿಸಿ ಜಾಗೃತಿ ಮೂಡಿಸಲು ಇದೇನ್ ಕರ್ಮ ಭಾಗ-1 ಮತ್ತು 2 ಅಭಿಯಾನ ಹಮ್ಮಿಕೊಳ್ಳಲಾಗುವುದು, ಮುಂದಿನ ದಿನಗಳಲ್ಲಿ ನಿವೇಶನ ಮತ್ತು ವಸತಿ ವಂಚಿತರ ಪರ ಆಯಾ ಸ್ಥಳಗಳಲ್ಲಿಯೇ ಸುದ್ದಿಗೋಷ್ಠಿ ನಡೆಸಲಾಗುವುದು ಎಂದು ತಿಳಿಸಿದರು.
ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾದರೂ ಸಹ ಜಿಲ್ಲಾ ಕೇಂದ್ರದಲ್ಲಿ ಒಂದು ಸುಸಜ್ಜಿತವಾದ ಕ್ರೀಡಾಂಗಣ ಇಲ್ಲದಿರುವುದು ಹೆಚ್.ಡಿ. ಕುಮಾರಸ್ವಾಮಿ ಸುಳ್ಳು ಆಶ್ವಾಸನೆಗಳಿಗೆ ನಿದರ್ಶನವಾಗಿದೆ ಎಂದು ಕಿಡಿಕಾರಿದ್ದಾರೆ. ಕುಟುಂಬ ರಾಜಕಾರಣಕ್ಕಾಗಿ ರಾಮನಗರದ ಜನರನ್ನು ಗುಲಾಮರಂತೆ ಕಾಣುತ್ತಿದ್ದಾರೆ ಎಂದರು.
ರಾಮನಗರ ಕ್ಷೇತ್ರದಿಂದ ಏಕಾಏಕಿ ಅನಿತಾ ಕುಮಾರಸ್ವಾಮಿ ಪಲಾಯನ ಏಕೆ ಮಾಡುತ್ತಿದ್ದಾರೆ? ತಮ್ಮ ಮಗ ನಿಖಿಲ್ ಕುಮಾರಸ್ವಾಮಿ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿಕೊಳ್ಳಲು ರಾಮನಗರ ಕ್ಷೇತ್ರವನ್ನು ಗುತ್ತಿಗೆ ಪಡೆದಿದ್ದಾರಾ? ಎಂದು ಪ್ರಶ್ನಿಸಿದರು. ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿಶ್ಚಿತವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಗೆಲುವಿಗಾಗಿ ಪಣ ತೊಟ್ಟಿದ್ದೇವೆ ಎಂದು ತಿಳಿಸಿದರು.