ಬೆಂಗಳೂರು: ರಾಜ್ಯದಲ್ಲಿ ಕಲುಷಿತ ನೀರು ಸೇವನೆ ಪ್ರಕರಣಗಳು ಹೆಚ್ಚುತ್ತಿರುವ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣನೆಗೆ ತೆಗೆದುಕೊಂಡಿದೆ.
ಇನ್ನು ಮುಂದೆ ಕಲುಷಿತ ನೀರು ಸೇವನೆಯಿಂದ ಸಾವು ಸಂಭವಿಸುವ ಪ್ರಕರಣಗಳು ಮರುಕಳಿಸಿದರೆ, ಜಿಲ್ಲಾ ಪಂಚಾಯತಿ ಸಿ.ಇ.ಒ ಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು. ನಗರ ಸಭೆಗಳ ಆಯುಕ್ತರ ಮೇಲೂ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಇಂದು ರಾಜ್ಯದಲ್ಲಿನ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಸಂಬಂಧಪಟ್ಟ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸಿದರು.
ಬಳಿಕ ಮಾತನಾಡಿದ ಅವರು, ಹಾಸ್ಟೆಲ್ ಗಳಲ್ಲಿಯೂ ವಿದ್ಯಾರ್ಥಿಗಳು ಕಲುಷಿತ ನೀರು ಕುಡಿದು ಆಸ್ಪತ್ರೆ ಸೇರಿದ್ದಾರೆ. ಈ ಬಗ್ಗೆ ಸಮರೋಪಾದಿಯಲ್ಲಿ ಕೆಲಸಗಳಾಗಬೇಕು. ಪೈಪ್ ಲೈನ್ ಸರಿಪಡಿಸುವುದು, ಟ್ಯಾಂಕ್ ಸ್ವಚ್ಛತಾ ಕಾರ್ಯ ತುರ್ತಾಗಿ ಕೈಗೊಳ್ಳಬೇಕು. ಎಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆಯಾಗಬಾರದು. ನೀರಿನ ಸ್ವಚ್ಛತೆ ಬಗ್ಗೆ ಆದ್ಯತೆ ವಹಿಸಬೇಕು ಜೊತೆಗೆ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ: ಬಾಕಿ ವೇತನಕ್ಕಾಗಿ ಮೈ ಮೇಲೆ ಮಲ ಸುರಿದುಕೊಂಡ ಪೌರಕಾರ್ಮಿಕರು; ಡಿಸಿಎಂ ತವರಲ್ಲೇ ದುಸ್ಥಿತಿ
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಬಡವರು ವಾಸಿಸುವ ಕೊಳಗೇರಿಗಳಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಹಾಗೂ ಚರಂಡಿ ನೀರಿನ ಪೈಪುಗಳು ಪ್ರತ್ಯೇಕವಾಗಿರುವುದನ್ನು ಖಾತ್ರಿಪಡಿಸಬೇಕು. ಪ್ರತ್ಯೇಕ ಇಲ್ಲದಿರುವ ಸ್ಥಳಗಳನ್ನು ಗುರುತಿಸಿ ಈ ಕುರಿತು ನೈರ್ಮಲ್ಯ ಅಭಿಯಾನ ಕೈಗೊಂಡು 15 ದಿನಗಳಲ್ಲಿ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.