ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಪಟ್ಟ ಯಾರಿಗೆ ಎಂಬ ಪ್ರಶ್ನೆಗೆ ಬಹುತೇಕ ಉತ್ತರ ಸಿಕ್ಕಿದ್ದು, ಸಿದ್ದರಾಮಯ್ಯ ಪಟ್ಟಕ್ಕೇರಲು ದೆಹಲಿಯಲ್ಲಿ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಸಿದ್ದರಾಮಯ್ಯ ಸಿಎಂ ಆಗುತ್ತಾರೆ ಎಂಬ ಸುದ್ದಿ ಹೊರ ಬೀಳುತ್ತಿದ್ದಂತೆ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಅಭಿಮಾನಿಗಳ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ. ಈ ಹಿನ್ನೆಲೆ ಸಿದ್ದರಾಮಯ್ಯ ಮನೆಮುಂದೆ ಭಾರೀ ಜನಸ್ತೋಮ ಸೇರಿದ್ದು, ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ಮೂಲಗಳ ಪ್ರಕಾರ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ, ಡಿಕೆ ಶಿವಕುಮಾರ್ ಅವರಿಗೆ ಪ್ರಬಲವಾದ ಎರಡು ಖಾತೆಗಳೊಂದಿಗೆ ಡಿಸಿಎಂ ಸ್ಥಾನ ನೀಡಲು ಎಐಸಿಸಿ ಮುಂದಾಗಿದೆ. ಅಷ್ಟೇ ಅಲ್ಲದೇ ಕೆಪಿಸಿಸಿ ಅಧ್ಯಕ್ಷರಾಗಿಯೇ ಡಿಕೆ ಶಿವಕುಮಾರ್ ಅವರೇ ಮುಂದುವರಿಯುವ ಸಾಧ್ಯತೆಯಿದೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಹ ಸಿಎಂ ಸ್ಥಾನಕ್ಕಾಗಿ ಪೈಪೋಟಿ ನೀಡಿದ್ದರು. ಅಂತಿಮವಾಗಿ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಮಣೆ ಹಾಕಿದೆ. ಶುಕ್ರವಾರ ಅಮವಾಸ್ಯೆ ಹಿನ್ನೆಲೆ ನಾಳೆಯೇ ಅಂದ್ರೆ ಗುರುವಾರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿದು ಬಂದಿದೆ.