ಬೆಂಗಳೂರು:ನರೇಂದ್ರ ಮೋದಿಯವರ ಜೊತೆ ಮಾತನಾಡುವ ಧೈರ್ಯ ರಾಜ್ಯ ಬಿಜೆಪಿಗೆ ಇಲ್ಲದೆ ಇದ್ದರೆ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲಿ. ಮೀಸಲಾತಿ ಹೆಚ್ಚಳದ ಅವಶ್ಯಕತೆ ಬಗ್ಗೆ ನಾವು ಪ್ರಧಾನಿಯವರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳದ ರಾಜ್ಯ ಸರ್ಕಾರದ ಪ್ರಚಾರಕ್ಕೆ ಕೇಂದ್ರ ಸರ್ಕಾರವೇ ಅಧಿಕೃತವಾಗಿ ತಡೆ ಹಾಕಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಸರಣಿ ಟ್ವೀಟ್ ಮಾಡಿ, ಮೀಸಲಾತಿ ಪ್ರಮಾಣ ಶೇ.50 ಕ್ಕಿಂತ ಹೆಚ್ಚಿಸುವ ಪ್ರಸ್ತಾಪ ಇಲ್ಲವೆಂದು ಲೋಕಸಭೆಯಲ್ಲಿ ಕೇಂದ್ರ ಸಚಿವರೇ ಹೇಳಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ರಾಜ್ಯ ಬಿಜೆಪಿ ನಾಯಕರ ಪ್ರಚಾರದ ಬಲೂನ್ ಗೆ ಕೇಂದ್ರ ಬಿಜೆಪಿ ಸರ್ಕಾರವೇ ಸೂಜಿ ಚುಚ್ಚಿದೆ ಎಂದು ಲೇವಡಿ ಮಾಡಿದ್ದಾರೆ.
ಶೇಕಡಾ 50ರ ಒಟ್ಟು ಮೀಸಲಾತಿ ಪ್ರಮಾಣದ ಮಿತಿಯನ್ನು ಕಿತ್ತುಹಾಕದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಹೇಗೆ ಹೆಚ್ಚಿಸಲು ಸಾಧ್ಯ? ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ನಿರ್ಧಾರ ಹಿಂದೆ ಇದ್ದದ್ದು ಆ ಸಮುದಾಯದ ಬಗೆಗಿನ ಕಾಳಜಿ ಅಲ್ಲ, ಈಗ ಕೇಂದ್ರ ಬಿಜೆಪಿ ಸರ್ಕಾರವೇ ರಾಜ್ಯ ಬಿಜೆಪಿಯ ಬಣ್ಣ ಬಯಲು ಮಾಡಿದೆ ಎಂದು ಸಾಮಾಜಿಕ ನ್ಯಾಯ ಎಂಬ ಟ್ಯಾಗ್ ಲೈನ್ ನಡಿ ವಿವರಿಸಿದ್ದಾರೆ.