ಬೆಂಗಳೂರು : ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ ಬಗ್ಗೆ ಕೇಂದ್ರದ ನಾಯಕರಾದ ಅಮಿತ್ ಶಾ ಹಾಗೂ ಪಕ್ಷದ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ. ಮೈತ್ರಿಯ ಬಗ್ಗೆ ನನಗೆ ಮಾಹಿತಿ ಇಲ್ಲ. ಬಿಜೆಪಿ ಚುನಾವಣಾ ಸಮಿತಿ ಸಭೆಯಲ್ಲಿ ಭಾಗವಹಿಸಲು ನಾಳೆಗೆ ದೆಹಲಿಗೆ ಹೋಗುತ್ತಿರುವುದಾಗಿ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಪಕ್ಷದ ನಾಯಕರೊಂದಿಗೆ ಮಾತುಕತೆ ನಡೆಸಿ, ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಮಾತುಕತೆ ನಡೆಸಲಿದ್ದೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಪುಟಿನ್ ಭೇಟಿಯಾದ ಕಿಮ್ ಜಾಂಗ್ ಉನ್ : ಪಾಶ್ಚಿಮಾತ್ಯ ದೇಶಗಳಲ್ಲಿ ಹೆಚ್ಚಿದ ಕಳವಳ
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ನೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವ ವಿಷಯದಲ್ಲಿ ಅಮಿತ್ ಶಾ ಅವರೇ ಮುತುವರ್ಜಿ ವಹಿಸಿ ಗಟ್ಟಿ ನಿರ್ಧಾರ ಪಡೆಯುತ್ತಾರೆ. ಅವರು ಯಾವುದೇ ನಿಲುವು ತೆಗೆದುಕೊಂಡರೂ ಸಹ ನಾವೆಲ್ಲ ಅದಕ್ಕೆ ಬದ್ದವಾಗಿರುತ್ತೇವೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಇಷ್ಟೊಂದು ಬೇಗ ಜನರ ವಿಶ್ವಾಸ ಕಳೆದುಕೊಳ್ಳುತ್ತದೆ ಎಂದು ಭಾವಿಸಿರಲಿಲ್ಲ. ಅವರ ಸರ್ಕಾರ ಜನಪ್ರಿಯತೆಯನ್ನು ಕಳೆದುಕೊಂಡಿದೆ. ಸರ್ಕಾರದ ವಿರುದ್ಧ ಹೋರಾಟ ರೂಪಿಸಲು ಒಟ್ಟಿಗೆ ಕುಳಿತು ಚರ್ಚಸಲಾಗುವುದು ಎಂದು ಮಾಹಿತಿ ನೀಡಿದರು.
ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ನಮ್ಮ ಮುಂದಿನ ಪ್ರತಿಭಟನಾ ಹಾದಿಯ ಬಗ್ಗೆ ಮಾತುಕತೆ ನಡೆಸಿ ನಿರ್ಧರಿಸಲಾಗುವುದು ಎಂದು ಯಡಿಯೂರಪ್ಪ ಹೇಳಿದ್ದಾರೆ.
ಖುದ್ದಾಗಿ ಮೈತ್ರಿ ಘೋಷಿಸಿದ್ದ ಯಡಿಯೂರಪ್ಪ..
2024ರ ಲೋಕಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಾತ್ಯತೀತ ಜನತಾ ದಳ (ಜೆಡಿಎಸ್) ಜೊತೆ ಹೊಂದಾಣಿಕೆ ಮಾಡಿಕೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಶುಕ್ರವಾರವಷ್ಟೇ ಘೋಷಿಸಿದ್ದರು.
ನಗರದ ಫ್ರೀಡಂ ಪಾರ್ಕ್ ನಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಸಂತೋಷ ತಂದಿದೆ. ಜೆಡಿಎಸ್ ಗೆ ನಾಲ್ಕು ಸೀಟ್ ಕೊಡಲು ಅಮಿತ್ ಶಾ ಒಪ್ಪಿಕೊಂಡಿದ್ದಾರೆ. ಮೈತ್ರಿಯಿಂದ ನಮ್ಮಗೆ ಶಕ್ತಿ ಬಂದಿದೆ. ಇದರಿಂದ 25ಕ್ಕೂ ಹೆಚ್ಚು ಸೀಟ್ ಗೆಲ್ಲಲು ನಮಗೆ ಸಹಾಯವಾಗಲಿದೆ ಎಂದಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.