ಬೆಂಗಳೂರು : ಉಪಚುನಾವಣೆ ನಡುವೆ ತಣ್ಣಗಾಗಿದ್ದ ಸಿಎಂ ಬದಲಾವಣೆ ಕೂಗು ಮತ್ತೆ ಜೋರಾಗ್ತಿದೆ. ಸಿಎಂ ಸಿದ್ದರಾಮಯ್ಯ ಬಣದ ನಾಯಕರು ಮತ್ತು ಶಾಸಕರು ಏ.12ರಿಂದ 2 ದಿನಗಳ ಕಾಲ ದೆಹಲಿಗೆ ಭೇಟಿ ನೀಡಲು ಸಜ್ಜಾಗುತ್ತಿದ್ದಾರೆ. ಈ ಬೆನ್ನಲ್ಲೇ ಇದೀಗ ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನರ್ ರಚನೆ ಚರ್ಚೆ ಗರಿಗೆದರಿದೆ.
ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ನೇತೃತ್ವದ ತಂಡದಲ್ಲಿ ಇತ್ತೀಚೆಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದ 30-35 ಶಾಸಕರು ದೆಹಲಿಗೆ ಭೇಟಿ ನೀಡುತ್ತಿದ್ದಾರೆಂದು ಮೂಲಗಳು ತಿಳಿಸಿವೆ. ಈ ತಂಡವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ಕರ್ನಾಟಕದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಲು ಚಿಂತನೆ ನಡೆಸಿದ್ದಾರೆಂದು ತಿಳಿದುಬಂದಿದೆ.
ಸಚಿವ ಸಂಪುಟ ಪುನರ್ ರಚನೆಗೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಒಪ್ಪಿಗೆ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದ್ದು, ಇದರ ಬೆನ್ನಲ್ಲೇ ಸಚಿವರಾಗಲು ಶಾಸಕರು ಲಾಬಿ ನಡೆಸಲು ಮುಂದಾಗಿದ್ದಾರೆಂದು ತಿಳಿದುಬಂದಿದೆ. ಪಕ್ಷದ ಹಿತದೃಷ್ಟಿಯಿಂದ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿಯಾಗಿ ಮುಂದುವರಿಸಬೇಕೆಂದು ಅವರು ಒತ್ತಾಯಿಸಬಹುದು ಎನ್ನಲಾಗ್ತಿದೆ.
ಒಟ್ಟಾರೆ ಇಷ್ಟು ದಿನ ತಣ್ಣಗಾಗಿದ್ದ ಸಿಎಂ ಬದಲಾವಣೆ ಚರ್ಚೆ ಈಗ ಮತ್ತೆ ಮುನ್ನೆಲೆಗೆ ಬಂದಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಮುಂದಿನ ಹೆಜ್ಜೆಯನ್ನ ಕಾದು ನೋಡಬೇಕಿದೆ.