ಬೆಂಗಳೂರು: ರಾಜ್ಯದಲ್ಲಿ ನಾಳೆ ನೂತನ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರಲಿದ್ದು, ನೂತನ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಪದಗ್ರಹಣ ಸಮಾರಂಭಕ್ಕೆ ಕಾಂಗ್ರೆಸ್ ವರಿಷ್ಠರು ಹಾಗೂ ಎಂಟು ರಾಜ್ಯಗಳ ಮುಖ್ಯಮಂತ್ರಿಗಳು ಆಗಮಿಸುತ್ತಿದ್ದಾರೆ.
ಎಐಸಿಸಿ ವರಿಷ್ಠ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ಮಾಜಿ ಅಧ್ಯಕ್ಷ/ ಎಐಸಿಸಿ ನಾಯಕ ರಾಹುಲ್ ಗಾಂಧಿ, ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡಿನ ಸಿಎಂ ಎಂ.ಕೆ.ಸ್ಟಾಲಿನ್, ರಾಜಸ್ತಾನ ಸಿಎಂ ಅಶೋಕ್ ಗೆಹ್ಲೋಟ್, ಬಿಹಾರ ಸಿಎಂ ನಿತೀಶ್ ಕುಮಾರ್, ಚತ್ತೀಸ್ಗಡ ಸಿಎಂ ಭೂಪೇಶ್ ಬಘೇಲ್, ಹಿಮಾಚಲ ಪ್ರದೇಶ ಸಿಎಂ ಸುಖ್ವೀಂದರ್ ಸಿಂಗ್, ಪುದುಚೇರಿ ಸಿಎಂ ರಂಗಸ್ವಾಮಿ, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಭಾಗಿಯಾಗಲಿದ್ದಾರೆ.
ಮಧ್ಯಾಹ್ನ 12.30ಕ್ಕೆ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.ವಿಧಾನಸಭೆ ಚುನಾವಣೆ ಫಲಿತಾಂಶ ಮೇ 13ರಂದು ಪ್ರಕಟವಾಗಿದ್ದು,ಮಧ್ಯಾಹ್ನ ಸಿದ್ದರಾಮಯ್ಯರನ್ನು ಸಿಎಂ ಮತ್ತು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಎಂದು ಘೋಷಿಸಲಾಯಿತು.
ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಲಿದ್ದು, ಕಾರ್ಯಕ್ರಮಕ್ಕೆ ಕ್ರೀಡಾಂಗಣ ಸಜ್ಜಾಗಿದೆ, ಕಾರ್ಯಕ್ರಮ ಕಣ್ತುಂಬಿಕೊಳ್ಳಲು ಮೈಸೂರು, ಮಂಡ್ಯ, ರಾಮನಗರ , ಉತ್ತರ ಕರ್ನಾಟಕ ಕೋಲಾರದಿಂದ ಜನರು ಆಗಮಿಸಲಿದ್ದು, ಪೊಲೀಸ್ ಬಿಗಿ ಭದ್ರತೆ ಕ್ರಮವಹಿಸಲಾಗಿದೆ.