ಹಾಸನ: ಶ್ರವಣಬೆಳಗೊಳ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಇಂದು ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಸ್ವಾಮೀಜಿಯವರ ಅಗಲಿಕೆಗೆ ಸಿಎಂ ಬೊಮ್ಮಾಯಿ , ಸಿದ್ದರಾಮಯ್ಯ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.
ಶ್ರೀ ಕ್ಷೇತ್ರ ಶ್ರವಣಬೆಳಗೊಳದ ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮೀಜಿಗಳು ನಮ್ಮನ್ನಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಪೂಜ್ಯರ ಅಗಲಿಕೆಯಿಂದ ನಾಡಿಗೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಅಪಾರ ಸಂಖ್ಯೆಯ ಭಕ್ತರಿಗೆ ಈ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಶ್ರವಣಬೆಳಗೊಳ ಜೈನ ಮಠದ ಪರಮಪೂಜ್ಯ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಜಿನೈಕ್ಯರಾಗಿರುವ ಸುದ್ದಿ ಅತೀವ ದುಃಖ ತಂದಿದೆ. ಪೂಜ್ಯರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಅವರ ಭಕ್ತರಿಗೆ ಈ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ವಿಧಿವಶರಾದ ಸುದ್ದಿ ತಿಳಿದು ಅತೀವ ನೋವಾಯಿತು. ಶ್ರೀಗಳ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಮಠದ ಅನುಯಾಯಿಗಳಿಗೆ ದೇವರು ಕರುಣಿಸಲಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.