ಬೆಂಗಳೂರು: ಮಾರ್ಚ್ 9 ರಿಂದ ಏಪ್ರಿಲ್ 15 ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿ,ಪಿಯುಸಿ ಪರೀಕ್ಷೆ ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಈ ಬಾರಿ ಒಟ್ಟು 8,69,490 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಇದಕ್ಕಾಗಿ ಒಟ್ಟು 3,307 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಶಿಕ್ಷಣ ಇಲಾಖೆ ಸಿಸಿಟಿವಿ ಅಳವಡಿಕೆ ಸೇರಿ ಬಹುತೇಕ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗುತ್ತದೆ. ಸಿಸಿ ಕ್ಯಾಮೆರಾ ಕಣ್ಗಾವಲು ಇರುತ್ತದೆ. ಪರೀಕ್ಷಾ ಕೇಂದ್ರದ ಸುತ್ತಲಿನ ಜೆರಾಕ್ಸ್ ಕೇಂದ್ರಗಳನ್ನು ಪರೀಕ್ಷೆಯ ಅವಧಿಯಲ್ಲಿ ಬಂದ್ ಮಾಡಲಾಗುತ್ತದೆ. ಸೈಬರ್ ಸೆಂಟರ್, ಟ್ಯೂಷನ್ ಕೇಂದ್ರಗಳು, ಕಂಪ್ಯೂಟರ್, ಗೇಮ್ಸ್ ಕೇಂದ್ರಗಳ ಮೇಲೆ ವಿಶೇಷ ನಿಗಾ ಇರಿಸಲಾಗುತ್ತದೆ.
ಪರೀಕ್ಷಾ ಕೇಂದ್ರಗಳಿಗೆ ತೆರಳುವ ವಿದ್ಯಾರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ಗ್ಯಾಜೆಟ್ಗಳಿಗೆ ಅವಕಾಶ ಇರುವುದಿಲ್ಲ. ಪರೀಕ್ಷೆ ಪ್ರಾರಂಭವಾಗುವ 15 ನಿಮಿಷ ಮೊದಲು ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಯಲ್ಲಿ ಹಾಜರಿರಬೇಕು ಇದೆ ಮೊದಲ ಬಾರಿಗೆ ಪಿಯುಸಿ ಪರೀಕ್ಷೆಯಲ್ಲಿ ಮಲ್ಟಿಪಲ್ ಚಾಯ್ಸ್ ಇರಲಿದೆ ಎಂದು ತಿಳಿಸಿದರು.