ದೆಹಲಿ: 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಈಗಾಗಲೇ ಸಿದ್ಧತೆ ಆರಂಭಿಸಿದೆ. ಮುಂದಿನ ಶುಕ್ರವಾರದಿಂದ ಹಲವು ರಾಜ್ಯಗಳಲ್ಲಿ ‘ಗ್ರಾಮ ಸಂಪರ್ಕ ಯಾತ್ರಾ’ ಆರಂಭಿಸಲು ಬಿಜೆಪಿ ಯುವ ಮೋರ್ಚಾ ನಿರ್ಧರಿಸಿದೆ.
‘ಗಡಿ ಗ್ರಾಮಗಳ ಸಂಪರ್ಕ ಯಾತ್ರೆಯು ಜನವರಿ 20ರಿಂದ ಆರಂಭವಾಗಲಿದೆ. ನಮ್ಮ ಯುವ ಕಾರ್ಯಕರ್ತರು ಗುಜರಾತ್, ರಾಜಸ್ಥಾನ, ಪಶ್ಚಿಮ ಬಂಗಾಳ, ಅಸ್ಸಾಂ, ತ್ರಿಪುರ ರಾಜ್ಯಗಳ ಹಲವು ಗ್ರಾಮಗಳಿಗೆ ಭೇಟಿ ನೀಡಿ ಮೋದಿ ಆಡಳಿತದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳನ್ನು ಅಧ್ಯಯನ ಮಾಡಲಿದ್ದಾರೆ. ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಸ್ಥಳೀಯರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಪ್ರತಿಕ್ರಿಯಿಸಿದ್ದಾರೆ.
ನಗರ ಪ್ರದೇಶಗಳಿಗೆ ಹೋಲಿಸಿದರೆ ಗ್ರಾಮೀಣ ಪ್ರದೇಶಗಳಲ್ಲಿ ಬಿಜೆಪಿಗೆ ಸಿಗುತ್ತಿದ್ದ ಮತಗಳ ಪ್ರಮಾಣ ಕಡಿಮೆ ಇರುತ್ತಿತ್ತು. ಇದೀಗ ಈ ವರ್ಗವನ್ನು ತನ್ನತ್ತ ಸೆಳೆಯಲು ಬಿಜೆಪಿ ಹಲವು ಕಾರ್ಯತಂತ್ರ ರೂಪಿಸಿದೆ.
ಆರಂಭದಲ್ಲಿ ಗುಜರಾತ್, ರಾಜಸ್ಥಾನ, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ತ್ರಿಪುರ ರಾಜ್ಯಗಳಿಗೆ ಭೇಟಿ ನೀಡಲಿರುವ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಜಾರಿಗೆ ಬಂದಿರುವ ಹಲವು ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಯತ್ನಿಸುತ್ತಿದ್ದಾರೆ. ಜನವರಿ 20ರಿಂದಲೇ ಯುವ ಮೋರ್ಚಾ ಕಾರ್ಯಕರ್ತರು ಗ್ರಾಮೀಣ ಪ್ರದೇಶಗಳಲ್ಲಿ ಸಂಚರಿಸಲಿದ್ದಾರೆ.