ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್‌ಗಿರಿಯ ದತ್ತಾತ್ರೇಯ ಪೀಠದಲ್ಲಿ ಇದೇ ಡಿಸೆಂಬರ್ 6 ರಿಂದ ಮೂರು ದಿನಗಳ ಕಾಲ ದತ್ತಾತ್ರೇಯ ಜಯಂತಿ ಆಚರಣೆ ಮಾಡಲು ಅನುಮತಿ ನೀಡಿ ಹೈಕೋರ್ಟ್ ಅನುಮತಿಸಿದೆ.
ದತ್ತಾತ್ರೇಯ ಪೀಠದಲ್ಲಿ ಪೂಜೆ ನೆರವೇರಿಸಲು ಮುಜಾವರ್ ಮತ್ತು ಅರ್ಚಕರನ್ನು ನೇಮಿಸಲು 2022ರ ಜು.19ರಂದು ಆದೇಶಿಸಲಾಗಿದೆ. ಹಾಗೆಯೇ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರ ನೇಮಕಾತಿಗೆ ಅರ್ಜಿ ಆಹ್ವಾನಿಸಿ ಆ.17ರಂದು ಅಧಿಸೂಚನೆ ಹೊರಡಿಸಲಾಗಿದೆ ಎಂದು ಸರ್ಕಾರ ಮಾಹಿತಿ ನೀಡಿತ್ತು.
ಮೇಲ್ಮನವಿಯು 2022ರ ಆ.22ರಂದು ವಿಚಾರಣೆಗೆ ಬಂದ ವೇಳೆ, ದತ್ತಾತ್ರೇಯ ಪೀಠದಲ್ಲಿ ಇಸ್ಲಾಂ ಮತ್ತು ಹಿಂದೂ ಸಂಪ್ರದಾಯಗಳದಂತೆ ಪೂಜಾ ವಿಧಿ ವಿಧಾನ ನೆರವೇರಿಸುವುದಕ್ಕೆ ಅವಕಾಶ ಕಲ್ಪಿಸಲು 2022ರ ಜು.1ರಂದು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ.
ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ತಮ್ಮನ್ನು ನೇಮಿಸಿ 2018ರಲ್ಲಿ ಅಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದ್ದ ಹೈಕೋರ್ಚ್ ಏಕ ಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಮುಸ್ಲಿಂ ಮೌಲ್ವಿ ಸೈಯದ್ ಗೌಸ್ ಮೊಹಿದ್ದೀನ್ ಸಲ್ಲಿಸಿರುವ ಮೇಲ್ಮನವಿ, ಬುಧವಾರ ಹಿರಿಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಈ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಹಾಜರಾಗಿ, ಡಿಸೆಂಬರ್ 6, 7 ಮತ್ತು 8 ಎಂದು ದತ್ತಾತ್ರೇಯ ಜಯಂತಿ ನಡೆಸಲು ಉದ್ದೇಶಿಸಲಾಗಿದೆ. ದೇವಸ್ಥಾನದಲ್ಲಿ ಪೂಜಾ ವಿಧಿ ವಿಧಾನದ ಉಸ್ತುವಾರಿ ವಹಿಸಲು ರಚಿಸಿರುವ ವ್ಯವಸ್ಥಾಪನಾ ಸಮಿತಿಯು ದತ್ತಾತ್ರೇಯ ಜಯಂತಿ ಆಚರಣೆಗೆ ಎಲ್ಲ ಸಿದ್ಧತೆ ನಡೆಸಿದೆ. ಅಲ್ಲದೆ, ಇಸ್ಲಾಂ ಮತ್ತು ಹಿಂದೂ ಧಾರ್ಮಿಕ ಸಂಪ್ರದಾಯದಂತೆ ದತ್ತಪೀಠದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ಸಮಿತಿಯಿಂದ ಅರ್ಚಕ ಹಾಗೂ ಮುಜಾವರ್ ಅವರನ್ನು ನೇಮಿಸಲಾಗಿದೆ.