ಬೆಂಗಳೂರು: ಬೆಂಗಳೂರಲ್ಲಿ ಮಾ.20 ರಂದು ಆಟೋ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲು ಆಟೋ ಸಂಘಟನೆಗಳು ನಿರ್ಧರಿಸಿವೆ ಎಂದು ಆದರ್ಶ ಆಟೋ ಯೂನಿಯನ್ ಅಧ್ಯಕ್ಷ ಮಂಜುನಾಥ್ ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರಲ್ಲಿ 21 ಆಟೋ ಚಾಲಕರ ಸಂಘಟನೆಗಳಿಂದ, ನಾಳೆಯಿಂದ ಆಟೋಗಳಲ್ಲಿ ಕಪ್ಪು ಬಾವುಟ ಕಟ್ಟಿಕೊಂಡು ಪ್ರತಿಭಟನೆ ಮಾಡುತ್ತೇವೆ. 2 ದಿನಗಳ ಕಾಲ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಗಡುವು ನೀಡುತ್ತೇವೆ. ನಂತರ ಪ್ರತಿಭಟನೆ ಮೂಲಕ ಸಿಎಂ ಬಸವರಾಜ ಬೊಮ್ಮಾಯಿಯವರ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳಿದ್ದಾರೆ.
ಸಾರಿಗೆ ಇಲಾಖೆ ಓಲಾ, ಉಬರ್ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ. ಇದರಿಂದ ಆಟೋ ಚಾಲಕರ ಆದಾಯಕ್ಕೆ ಹೊಡೆತ ಬಿದ್ದಿದೆ. ಕೂಡಲೇ ರ್ಯಾಪಿಡೋ ಬೈಕ್ ಟ್ಯಾಕ್ಸಿ ಅನುಮತಿ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ. ರ್ಯಾಪಿಡೋ ಬೈಕ್ ಟ್ಯಾಕ್ಸಿಯನ್ನು ನಿಷೇಧಿಸುವಂತೆ ನಗರದ 21 ಆಟೋ ಚಾಲಕರ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿವೆ.