ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ʼಗೃಹಲಕ್ಷ್ಮಿʼಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು, ಮನೆಯೊಡತಿಯರಿಗೆ ಪ್ರತಿ ತಿಂಗಳು ₹2,000 ನೀಡುವ ಈ ಬಹುನಿರೀಕ್ಷಿತ ಯೋಜನೆಯ ಚಾಲನೆಗೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದೆ.
ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಿಂದಲೇ ಏಕಕಾಲಕ್ಕೆ ರಾಜ್ಯವ್ಯಾಪಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ನಾಳೆ ಅದೇ ಸಮಯಕ್ಕೆ ಬಿಬಿಎಂಪಿ ಕೂಡ ಬೆಂಗಳೂರಿನಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಯೋಜನೆಗೆ ಚಾಲನೆ ಸಿಗಲಿದೆ.
ಸದ್ಯ ಈ ಅದ್ಧೂರಿ ಕಾರ್ಯಕ್ರಮಕ್ಕಾಗಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗಿದ್ದು, ಲಕ್ಷಾಂತರ ಜನ ಸೇರುವ ಸಾಧ್ಯತೆ ಇದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಕಾಂಗ್ರೆಸ್ ಸರ್ಕಾರದ ಪ್ರಮುಖರೆಲ್ಲ ಮೈಸೂರಿನಲ್ಲೇ ಬೀಡುಬಿಟ್ಟಿದ್ದಾರೆ.
ರಾಜ್ಯದ ಕೋಟ್ಯಂತರ ಮಹಿಳೆಯರು ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡು, ಯೋಜನೆಯ ಅನುಷ್ಠಾನಕ್ಕೆ ಕಾತರದಿಂದ ಕಾದಿದ್ದಾರೆ.
ರಾಜ್ಯಕ್ಕೆ ಸಿಎಂ ಕರೆ: ಈ ಕಾರ್ಯಕ್ರಮದ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕುಟುಂಬ ನಿರ್ವಹಣೆಯ ಹೊಣೆಹೊತ್ತ ನಾಡಿನ ಕೋಟಿಗೂ ಅಧಿಕ ಮಹಿಳೆಯರಿಗೆ ಆರ್ಥಿಕ ನೆರವು ನೀಡಿ, ಬೆಲೆಯೇರಿಕೆಯ ಸಂಕಷ್ಟಗಳ ನಡುವೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಅವರ ಕನಸನ್ನು ನನಸಾಗಿಸುವ ಗೃಹಲಕ್ಷ್ಮಿ ಯೋಜನೆ ಜಾರಿಗೆ ಕ್ಷಣಗಣನೆ ಆರಂಭಗೊಂಡಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಸಮಾರಂಭಕ್ಕೆ ತಾವೆಲ್ಲರೂ ಆಗಮಿಸಿ, ಮಹಿಳಾ ಸಬಲೀಕರಣದ ನಮ್ಮ ಪ್ರಯತ್ನಕ್ಕೆ ಕೈಜೋಡಿಸಿ ಎಂದು ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.
ನಾಡಿನ ಪ್ರತಿಯೊಬ್ಬ ಜನಪ್ರತಿನಿಧಿಯು ಪಕ್ಷಬೇಧ ಮರೆತು ನಾಳಿನ ಗೃಹಲಕ್ಷ್ಮಿ ಯೋಜನೆಯ ಚಾಲನೆ ಸಮಾರಂಭದಲ್ಲಿ ಪಾಲ್ಗೊಂಡು, ಮಹಿಳಾ ಸಬಲೀಕರಣದ ನಮ್ಮ ಪ್ರಯತ್ನಕ್ಕೆ ಬಲ ತುಂಬಬೇಕೆಂದು ಕೇಳಿಕೊಂಡಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.