ದೊಡ್ಡಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿ 207ರಲ್ಲಿ ಬರುವ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕಬೆಳವಂಗಲ ಗ್ರಾಮಸ್ಥರು ಅಂಡರ್ ಪಾಸ್ ನಿರ್ಮಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಸಮಸ್ಯೆ ಪರಿಹರಿಸುವಲ್ಲಿ ಶಾಸಕ ಧೀರಜ್ ಮಯನಿರಾಜು ಸರಿಯಾಗಿ ಸ್ಪಂದಿಸುತ್ತಿಲ್ಲವೆಂದು ಗ್ರಾಮಸ್ಥರ ಆಕ್ರೋಶ ಹೊರಹಾಕಿದರು.
ಹಲವು ತಿಂಗಳಿಂದ ಅಂಡರ್ ಪಾಸ್ ನಿರ್ಮಿಸುವಂತೆ ಒತ್ತಾಯಿಸುತ್ತಿರುವ ಗ್ರಾಮಸ್ಥರು, ಇಂದು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎನ್. ಶಿವಶಂಕರ್ ಅವರಿಗೆ ಹೆದ್ದಾರಿ ಕಾಂಗಾರಿಯಿಂದಾಗುತ್ತಿರುವ ಸಮಸ್ಯೆ ಬಗ್ಗೆ ವಿವರಣೆ ನೀಡಿದರು.
ಸಮಸ್ಯೆ ಆಲಿಸಲು ಗ್ರಾಮಕ್ಕೆ ಆಗಮಿಸಿದ್ದ ಜಿಲ್ಲಾಧಿಕಾರಿ ಬಳಿ ಅಂಡರ್ ಪಾಸ್ ನಿರ್ಮಿಸುವಂತೆ ಪಟ್ಟು ಹಿಡಿದ ಗ್ರಾಮಸ್ಥರು, ಶಾಸಕ ಧೀರಜ್ ಮಯನಿರಾಜು ಸರಿಯಾಗಿ ಸ್ಪಂದಿಸುತ್ತಿಲ್ಲವೆಂದು ಅವರ ವಿರುದ್ಧ ಆಕ್ರೋಶ ಹೊರ ಹಾಕಿದರು. ‘ಚಿಕ್ಕಬೆಳವಂಗಲ ಗ್ರಾಮವು ಗೊರವನಹಳ್ಳಿ ಲಕ್ಷ್ಮಿದೇವಿ, ಸಾಸಲು ಹಾಗೂ ಮಧುಗಿರಿ ಸೇರಿದಂತೆ 150ಕ್ಕೂ ಹೆಚ್ಚು ಹಳ್ಳಿಗಳಿಗೆ ಸಂಪರ್ಕ ರಸ್ತೆಯಾಗಿದ್ದು, ಇಲ್ಲಿ ಅಂಡರ್ ಪಾಸ್ ನಿರ್ಮಿಸಬೇಕು. ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ವಾಹನಗಳು ಸಂಚರಿಸುತ್ತವೆ. ಅಂಡರ್ ಪಾಸ್ ನಿರ್ಮಿಸದೇ ಇದ್ದರೆ ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ’ ಎಂದು ಗ್ರಾಮಸ್ಥರು ಅವಲತ್ತುಕೊಂಡರು.
ಇದನ್ನೂ ಓದಿ; ‘ಸಂಧಾನ ಸೂತ್ರವಿಲ್ಲ; ಶೀಘ್ರದಲ್ಲೇ ಕೇಂದ್ರದ ಬಳಿಗೆ ಸರ್ವಪಕ್ಷ ನಿಯೋಗ’
‘ಸಂಭವನೀಯ ಅಪಘಾತಗಳನ್ನು ತಪ್ಪಿಸಬೇಕಾದರೆ ರಾಷ್ಟ್ರೀಯ ಹೆದ್ದಾರಿಗೆ ಅಂಡರ್ ಪಾಸ್ ನಿರ್ಮಿಸಬೇಕು’ ಎಂದು ಪಟ್ಟು ಹಿಡಿದ ಗ್ರಾಮಸ್ಥರು, ರಸ್ತೆ ಕಾಮಗಾರಿ ಸ್ಥಳಕ್ಕೆ ಬೇಟಿ ನೀಡಿದ ಜಿಲ್ಲಾಧಿಕಾರಿ ಶಿವಶಂಕರ್ ಅವರ ಬಳಿ ಅಂಡರ್ ಪಾಸ್ ನಿರ್ಮಿಸುವಂತೆ ಒತ್ತಾಯಿಸಿದರು.
‘ಈಗಾಗಲೇ ಹೆದ್ದಾರಿ ಕಾಮಗಾರಿಯಿಂದ ವಿದ್ಯಾರ್ಥಿಗಳಿಗೆ ಹಾಗೂ ರೈತರಿಗೆ ಸಮಸ್ಯೆ ಆಗುತ್ತಿದೆ. ಆದ್ದರಿಂದ, ಅಂಡರ್ ಪಾಸ್ ಮಾಡಬೇಕು. ಸುಮಾರು 150 ಹಳ್ಳಿಗಳಿಗೆ ಚಿಕ್ಕಬೆಳವಂಗಲ ಸಂಪರ್ಕ ರಸ್ತೆಯಾಗಿದೆ. ಅವೈಜ್ಞಾನಿಕ ಹೆದ್ದಾರಿ ನಿರ್ಮಾಣದಿಂದಾಗಿ ಗ್ರಾಮದ ಜನರಿಗೆ ತೊಂದರೆ ಆಗುತ್ತಿದೆ’ ಎಂದು ಜಿಲ್ಲಾಧಿಕಾರಿಗಳಿಗೆ ಗ್ರಾಮದ ಜನರು ಮನವರಿಕೆ ಮಾಡಿಕೊಟ್ಟರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.