ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ 40% ಕಮೀಷನ್ ಆರೋಪದ ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ದಾಸ್ ಅಧ್ಯಕ್ಷತೆಯಲ್ಲಿ ರಚಿಸಿದ್ದ ಸಮಿತಿಯನ್ನು ವಿಚಾರಣಾ ಆಯೋಗವಾಗಿ ಬದಲಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕಾಮಗಾರಿಗಳ ಟೆಂಡರ್, ಪ್ಯಾಕೇಜ್ ಪದ್ಧತಿ, ಪುನರ್ ಅಂದಾಜು, ಬಾಕಿ ಮೊತ್ತ ಬಿಡುಗಡೆ ವಿಷಯಗಳಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಗಂಭೀರ ಆರೋಪ ಮಾಡಿದ್ದರು. ಗುತ್ತಿಗೆ ಕಾಮಗಾರಿಗಳಲ್ಲಿ 40% ಕಮೀಷನ್ ಹೊಡೆಯುತ್ತಿದೆ ಎಂದು ದೂರಿದ್ದರು.
ಈ ಬಗ್ಗೆ ವರದಿ ನೀಡುವಂತೆ ಇತ್ತೀಚೆಗೆ ನಾಗಮೋಹನ್‌ದಾಸ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿತ್ತು. ಆ ಆದೇಶವನ್ನು ರದ್ದು ಮಾಡಲಾಗಿದ್ದು, ಅದರ ಬದಲು, ಪ್ರಕರಣದ ತನಿಖೆಗೆ ಎಚ್.ಎನ್. ನಾಗಮೋಹನ್‌ದಾಸ್ ಅವರ ನೇತೃತ್ವದಲ್ಲಿ ವಿಚಾರಣಾ ಆಯೋಗ ನೇಮಿಸಲಾಗಿದೆ.
ಇದನ್ನೂ ಓದಿ:
ಹೆಚ್ಚಿನ ಪ್ರಮಾಣದಲ್ಲಿ ಕಾಮಗಾರಿಗಳನ್ನು ನಡೆಸುವ ಇಲಾಖೆಗಳಾದ ಲೋಕೋಪಯೋಗಿ, ಜಲಸಂಪನ್ಮೂಲ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್, ಸಣ್ಣ ನೀರಾವರಿ ಇಲಾಖೆಗಳಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರಗಳ ಕುರಿತು ಸ್ಥಳ ಹಾಗೂ ದಾಖಲಾತಿಗಳನ್ನು ಪರಿಶೀಲಿಸಿ, ವಿವರವಾದ ತನಿಖೆ ನಡೆಸಬೇಕು ಹಾಗೂ ಲೋಪದೋಷಗಳ ಮಾಹಿತಿ, ಅದಕ್ಕೆ ಕಾರಣರಾದ ಆರೋಪಿಗಳನ್ನು ಪತ್ತೆ ಮಾಡಿ ಸಂಪೂರ್ಣ ವರದಿಯನ್ನು ಮೂರು ತಿಂಗಳ ಒಳಗೆ ಸಲ್ಲಿಸುವಂತೆ ಅಧಿಸೂಚನೆಯಲ್ಲಿ ತಿಳಿಸಿದೆ.
ಕಾಂಗ್ರೆಸ್ ಪಕ್ಷವು ಚುನಾವಣೆಗೂ ಮುನ್ನ ಬಿಜೆಪಿ ವಿರುದ್ಧ ಇದೇ 40% ಕಮೀಷನ್ ಆರೋಪವನ್ನು ಪ್ರಮುಖ ಅಸ್ತ್ರವಾಗಿ ಬಳಸಿಕೊಂಡಿತ್ತು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.