ಬೆಂಗಳೂರು : ಬಾಗಲಕೋಟೆಯಲ್ಲಿ ನಡೆದ ಕಲ್ಲು ತೂರಾಟ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಶಾಂತಿ ಮತ್ತು ಸೌಹಾರ್ದ ಕಾಪಾಡಿಕೊಳ್ಳುವಂತೆ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.
ಘಟನೆ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ. ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ.
ಇದನ್ನೂ ಓದಿ : ರೌಡಿಶೀಟರ್ ಬಿಕ್ಲು ಶಿವು ಹತ್ಯೆ ಪ್ರಕರಣ, ಇಂದು ಭೈರತಿ ಭವಿಷ್ಯ ನಿರ್ಧಾರ
ಈಗಾಗಲೇ ಪ್ರಕರಣದ ಸಂಬಂಧ ಕೆಲವು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ಶಿಕ್ಷೆ ನಿಶ್ಚಿತ. ನಾಡಿನ ಜನರಿಗೆ ಭಯಮುಕ್ತ ನೆಮ್ಮದಿಯ ಬದುಕು ನೀಡುವುದು ನಮ್ಮ ಮೊದಲ ಆದ್ಯತೆ. ಜನರ ಶಾಂತಿ – ನೆಮ್ಮದಿಗೆ ಭಂಗ ತರುವ ಯಾವುದೇ ವ್ಯಕ್ತಿ – ಶಕ್ತಿಗಳನ್ನು ನಾವು ಸಹಿಸುವುದಿಲ್ಲ. ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೂ ಕಿವಿಗೊಡದೆ, ಸಂಯಮದಿಂದ ವರ್ತಿಸಿ. ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ಮಾಡಲಿದೆ.
ಶಿವಾಜಿ ಜಯಂತಿ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ಭಾವಚಿತ್ರ ಮೆರವಣಿಗೆಯಲ್ಲಿ ಹಿಂದೂ ಸಂಘಟನೆ ಮುಖಂಡರು ಸಾಗುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಕಲ್ಲು, ಚಪ್ಪಲಿ ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಸೇರಿ ಓರ್ವ ಸಾರ್ವಜನಿಕರಿಗೆ ಗಾಯವಾಗಿರುವ ಮಾಹಿತಿ ಇದ್ದು, ಕಲ್ಲು ತೂರಾಟ ಹಿನ್ನೆಲೆ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆ ಬೆನ್ನಲ್ಲೇ ಫೆ.24ರ ಮಧ್ಯರಾತ್ರಿವರೆಗೆ ಹಳೆ ಬಾಗಲಕೋಟೆ, ನವನಗರ, ವಿದ್ಯಾಗಿರಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.