Thursday, September 28, 2023
spot_img
- Advertisement -spot_img

ಗ್ಯಾರಂಟಿಗಳ ‘ಅಡ್ಡ ಪರಿಣಾಮ’ದ ತೀವ್ರತೆ ಜನರಿಗೆ ತಟ್ಟುತ್ತಿದೆ: ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ‘ಅಡ್ಡ ಪರಿಣಾಮ’ದ ತೀವ್ರತೆ ಜನರಿಗೆ ತಟ್ಟುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಾರಿಗೆ ಸಂಘಟನೆಗಳ ಒಕ್ಕೂಟ ಕರೆ ಕೊಟ್ಟಿರುವ ಬೆಂಗಳೂರು ಬಂದ್ ವಿಚಾರವಾಗಿ ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ‘ಅಡ್ಡ ಪರಿಣಾಮ’ದ ತೀವ್ರತೆ ಜನರಿಗೆ ತಟ್ಟುತ್ತಿದೆ. ಸರ್ಕಾರಿ ಸೌಲಭ್ಯಗಳ ಹಂಚಿಕೆಯಲ್ಲಿನ ಅಸಮಾನತೆ, ಪಕ್ಷಪಾತವು ಅರಾಜಕತೆ ಸೃಷ್ಟಿಸಿದೆ. ಅವೈಜ್ಞಾನಿಕ, ಅರೆಬೆಂದ ‘ಶಕ್ತಿ’ ಯೋಜನೆಯ ಫಲವಾಗಿ ಇವತ್ತು ಖಾಸಗಿ ಸಂಚಾರ ವ್ಯವಸ್ಥೆ ಬುಡಮೇಲಾಗಿದೆ’ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ; ಊಬರ್‌, ಆಟೋ ಚಾಲಕರ ಪ್ರತಿಭಟನೆ ರಾಜಕೀಯ ಪ್ರೇರಿತ : ಡಿಕೆಶಿ ಕಿಡಿ

‘ಸಾಲಸೋಲ ಮಾಡಿ ಕ್ಯಾಬ್, ಆಟೋ ಓಡಿಸಿಕೊಂಡು ಬದುಕುತ್ತಿದ್ದವರು ಬೀದಿ ಪಾಲಾಗಿದ್ದಾರೆ. ನಿತ್ಯದ ಬದುಕು ಸಾಗಿಸುವುದೇ ದುಸ್ತರ ಎನ್ನುವ ಸ್ಥಿತಿಯಲ್ಲಿ ಅವರಿದ್ದಾರೆ. ಇನ್ನು, ಸರ್ಕಾರಿ ಸಾರಿಗೆಯಷ್ಟೇ ಉತ್ತಮವಾಗಿ ಸೇವೆ ಒದಗಿಸುತ್ತಿರುವ ಖಾಸಗಿ ಬಸ್ ಜಾಲವನ್ನು ಸರ್ಕಾರ ಹಾಳು ಮಾಡಿದೆ. ಅನೇಕರ ಬದುಕಿಗೆ ಗ್ಯಾರಂಟಿ ಇಲ್ಲದಂತೆ ಮಾಡಿದೆ’ ಎಂದು ಹೇಳಿದ್ದಾರೆ.

‘ಈ ಬಂದ್ ನಿಂದ ಸರ್ಕಾರಿ ಸಾರಿಗೆಗೆ ಪರ್ಯಾಯವಾಗಿದ್ದ ಖಾಸಗಿ ಸಾರಿಗೆ ಜಾಲ ಸಂಪೂರ್ಣ ಸ್ಥಗಿತವಾಗಿದೆ. ಶಾಲಾ ಮಕ್ಕಳು, ಸಾರ್ವಜನಿಕರು, ವಿಮಾನ ನಿಲ್ದಾಣಕ್ಕೆ ತೆರಳುವವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಣ್ಣು, ತರಕಾರಿ ಸೇರಿ ಅಗತ್ಯ ವಸ್ತುಗಳ ಸಾಗಣೆಯಲ್ಲಿ ವ್ಯತ್ಯಯ ಆಗಿದೆ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ; ಹೆಚ್ಚಾಯ್ತು ಖಾಸಗಿ ಸಾರಿಗೆ ಕಿಚ್ಚು : ಫ್ರೀಡಂ ಪಾರ್ಕ್‌ನಲ್ಲಿ ಹೋರಾಟಗಾರರ ಜಮಾವಣೆ

‘ಸರ್ಕಾರವು ಖಾಸಗಿ ಸಾರಿಗೆ ಒಕ್ಕೂಟದವರ ಬೇಡಿಕೆಗಳನ್ನು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯತೆಯಿಂದ ಪರಿಶೀಲಿಸಬೇಕು. ಅವರ ಬೇಡಿಕೆಗಳು ಈಡೇರಿಸಲಾಗದ ಅಸಾಧ್ಯ ಡಿಮ್ಯಾಂಡ್ ಗಳಲ್ಲ. ಅವರಿಗೂ ಕುಟುಂಬಗಳಿವೆ, ತಂದೆತಾಯಿ, ಮಕ್ಕಳು ಇರುತ್ತಾರೆ ಎನ್ನುವುದನ್ನು ಮರೆಯಬಾರದು’ ಎಂದು ಸಲಹೆ ನೀಡಿದ್ದಾರೆ.

‘ಕಾಟಾಚಾರಕ್ಕೆ ಕರೆದು ಮಾತನಾಡುವುದಲ್ಲ. ವಾಸ್ತವತೆಗೆ ತಕ್ಕಂತೆ ಕಷ್ಟದಲ್ಲಿರುವ ಅವರಿಗೆ ನೆರವಾಗಬೇಕು. ನುಡಿದಂತೆಯೇ ನಡೆದು, ‘ಗ್ಯಾರಂಟಿ ಬಾಧಿತರ’ ಬದುಕಿಗೆ ಪರಿಹಾರ ಒದಗಿಸಬೇಕು ಎನ್ನುವುದು ನನ್ನ ಆಗ್ರಹ. ತಕ್ಷಣವೇ ಬಂದ್ ನಿರತರನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಕರೆದು ಮಾತನಾಡಬೇಕು’ ಎಂದು ಒತ್ತಾಯಿಸಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles